ಟೊಯೊಟೊ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ: ಸಿಎಂ ಸಂತಾಪ

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ನ (Toyota Kirloskar Motor Company) ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (Vikram Kirloskar) ನಿನ್ನೆ ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.
ಅವರು ನಿನ್ನೆ ಬೆಳಗ್ಗೆ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಟೊಯೋಟಾ ಕಿರ್ಲೋಸ್ಕರ್ ಮೋಟಾರ್ನ ಉಪಾಧ್ಯಕ್ಷರಾದ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನದ ಬಗ್ಗೆ ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಪ್ರಕಟಣೆ ಮೂಲಕ ದೃಢಪಡಿಸಿದೆ.
ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ನೆರವೇರಲಿದೆ.ವಿಕ್ರಮ್ ಅವರು ಕಿರ್ಲೋಸ್ಕರ್ ಗ್ರೂಪ್ನ ನಾಲ್ಕನೇ ತಲೆಮಾರಿನ ಮುಖ್ಯಸ್ಥರಾಗಿದ್ದರು. ಅವರು ಕಿರ್ಲೋಸ್ಕರ್ ಸಿಸ್ಟಮ್ಸ್ ಲಿಮಿಟೆಡ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ನ ಉಪಾಧ್ಯಕ್ಷರೂ ಆಗಿದ್ದರು.
ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ನಲ್ಲಿ ಪದವೀಧರರಾದ ವಿಕ್ರಮ್ ಕಿರ್ಲೋಸ್ಕರ್ ಅವರು ಭಾರತೀಯ ಆಟೋ ವಲಯದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು.
ವಿಕ್ರಮ್ ಕಿರ್ಲೋಸ್ಕರ್ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಉದ್ಯಮ ವಲಯದ ಗಣ್ಯರು, ಸಮಾಜದ ಹಲವು ಕ್ಷೇತ್ರಗಳ ದಿಗ್ಗಜರು ಸಂತಾಪ ಸೂಚಿಸಿದ್ದಾರೆ.
ನವೆಂಬರ್ 25 ರಂದು ಮುಂಬೈನಲ್ಲಿ ನಡೆದ ಟೊಯೋಟಾ ಇನ್ನೋವಾ ಹೈಕ್ರಾಸ್ ಅನಾವರಣದಲ್ಲಿ ಕಿರ್ಲೋಸ್ಕರ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


