'ಕೋಟಿ ಕಂಠ ಗಾಯನ'ಕ್ಕೆ ಸಿಎಂ ಬೊಮ್ಮಾಯಿ ಚಾಲನೆ, ನಾಡಿನಾದ್ಯಂತ ಪಸರಿಸಿದ ಕನ್ನಡದ ಕಂಪು

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ 'ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡುವುದರೊಂದಿಗೆ ನಾಡಿನಾದ್ಯಂತ ಕನ್ನಡದ ಕಂಪು ಪಸರಿಸಿತು
ಸಿಎಂ ಬಸವರಾಜ ಬೊಮ್ಮಾಯಿ ಮತ್ತಿತರರು
ಸಿಎಂ ಬಸವರಾಜ ಬೊಮ್ಮಾಯಿ ಮತ್ತಿತರರು

ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ 'ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡುವುದರೊಂದಿಗೆ ನಾಡಿನಾದ್ಯಂತ ಕನ್ನಡದ ಕಂಪು ಪಸರಿಸಿತು. ನಾಡು, ನಾಡು, ನುಡಿ ಸಂರಕ್ಷಣಾ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದ ಮುಖ್ಯಮಂತ್ರಿ, ಕನ್ನಡದ ಆಯ್ದ ಗೀತೆಗಳಿಗೆ ಧ್ವನಿಗೂಡಿಸಿದರು. 

ನಾಡಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿಧ್ಯಾಚೇತನ, ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡು ಸೇರಿದಂತೆ ಒಟ್ಟು ಆರು ಹಾಡುಗಳನ್ನು ಗಾಯಕರು ಹಾಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 

ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಕನ್ನಡ ಗೀತೆ ಹಾಡುವ ಮೂಲಕ, ನಾವೆಲ್ಲ ಕನ್ನಡಕ್ಕಾಗಿ ಒಗ್ಗಟ್ಟಾಗಿದ್ದೇವೆ ಎಂಬುದನ್ನು ತೋರಿಸಿದ್ದಾರೆ. ನ.1ರಂದು ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು, ಅಂದು  ಪುನೀತ್​ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಪುನೀತ್ ರಾಜ್‌ಕುಮಾರ್  ಅತಿ ಚಿಕ್ಕ ವಯಸ್ಸಿನಲ್ಲಿ ಈ ಪ್ರಶಸ್ತಿ ಪಡೆಯುತ್ತಿರುವ ರತ್ನವಾಗಿದ್ದಾರೆ. ಈ ಕಾರ್ಯಕ್ರಮಕ್ಕೆ ರಜನಿಕಾಂತ್, ಜ್ಯೂನಿಯರ್ ಎನ್‌ಟಿ ಆರ್‌ ಗೆ ಆಹ್ವಾನ ನೀಡಲಾಗಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರ, ರಾಜ್‌ಕುಮಾರ್ ಕುಟುಂಬದವರು ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು. 

ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಧಾರವಾಡದ ಕಿಮ್ಸ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು, ಕನ್ನಡದ ಆಯ್ದ ಗೀತೆಗಳನ್ನು ಹಾಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com