ಹರ್ಷ ಹತ್ಯೆ ಬಳಿಕ ಪ್ರಚೋದನಾಕಾರಿ ಹೇಳಿಕೆ ಆರೋಪ: ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು
ಸಾರ್ವಜನಿಕರ ಶಾಂತಿಗೆ ಭಂಗವನ್ನುಂಟು ಮಾಡುವ ಹೇಳಿಕೆ ನೀಡಿದ್ದ ಆರೋಪದಡಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ ವಿರುದ್ಧ ಇಲ್ಲಿನ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Published: 09th April 2022 10:09 AM | Last Updated: 09th April 2022 01:31 PM | A+A A-

ಕೆ ಎಸ್ ಈಶ್ವರಪ್ಪ
ಶಿವಮೊಗ್ಗ: ಕಳೆದ ಫೆಬ್ರವರಿಯಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ ಪ್ರಚೋದನಕಾರಿ ಹೇಳಿಕೆ (Provocative Statement) ಹಾಗೂ ಸಾರ್ವಜನಿಕರ ಶಾಂತಿಗೆ ಭಂಗವನ್ನುಂಟು ಮಾಡುವ ಹೇಳಿಕೆ ನೀಡಿದ್ದ ಆರೋಪದಡಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಹಾಗೂ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ ವಿರುದ್ಧ ಇಲ್ಲಿನ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ನಂತರ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆಗೆ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದ್ದೇ ಕಾರಣ ಎಂದು ಆರೋಪಿಸಲಾಗಿತ್ತು.
ಜವಾಬ್ದಾರಿಯುತ ಸ್ಥಾನಗಳಲ್ಲಿದ್ದಲ್ಲಿದ್ದು ಕಾನೂನು ಸುವ್ಯವಸ್ಥೆ ಕಾಪಾಡಬೇಕಾದವರೇ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸದೇ ಕೋಮು ಸೌಹಾರ್ದತೆ ಕದಡುವ ಹೇಳಿಕೆ ನೀಡಿದ್ದರಿಂದಲೇ ನಗರದ ಹಲವು ಕಡೆಗಳಲ್ಲಿ ಕೋಮುಗಲಭೆ ಉಂಟಾಗಿದೆ ಎಂದು ಪೀಸ್ ಆರ್ಗನೈಸೇಷನ್ ಕಾರ್ಯದರ್ಶಿ ರಿಯಾಜ್ ಅಹಮದ್ ಇಲ್ಲಿನ ಪೊಲೀಸರಿಗೆ ದೂರು ಸಲ್ಲಿಸಲು ಮುಂದಾಗಿದ್ದರು.
ಆದರೆ, ಪೊಲೀಸರು ದೂರು ಸ್ವೀಕರಿಸಿರಲಿಲ್ಲ ಎಂದು ಬೆಂಗಳೂರಿನ ಅಪರ ಮುಖ್ಯ ಮಹಾನಗರ ದಂಡಾಧಿಕಾರಿಗಳ ವಿಶೇಷ ನ್ಯಾಯಾಲಯ ಮೊರೆಹೋಗಿದ್ದರು. ಇದೀಗ ನ್ಯಾಯಾಲಯ ನೀಡಿದ ಆದೇಶದ ಅನ್ವಯ, ಬೆಂಗಳೂರಿನಲ್ಲಿ ಸಲ್ಲಿಕೆಯಾಗಿದ್ದ ಪಿಸಿಆರ್ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ದೂರು (Complaint) ದಾಖಲಿಸಲಾಗಿದೆ.
ದೂರಿನ ಅನ್ವಯ ನಾವು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಶಿವಮೊಗ್ಗ ಎಸ್ಪಿ ಬಿ ಎಂ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ.