
ಸಂಗ್ರಹ ಚಿತ್ರ
ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ವಾತಾವರಣದಲ್ಲಿ ತಾಪಮಾನ ಏರಿಕೆಯಾಗುವುದರಿಂದ ಸ್ಥಳೀಯವಾಗಿ ವಾಯುಭಾರ ಕುಸಿತವಾಗಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗುವುದು ಏಪ್ರಿಲ್ ತಿಂಗಳಲ್ಲಿ ಸಾಮಾನ್ಯ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸುಳಿವು ಕಂಡುಬರುತ್ತಿದೆ. ಹೀಗಾಗಿ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಭಾರೀ ಮಳೆಯಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹಾರಾಟ ಸ್ಥಗಿತ, 29 ವಿಮಾನಗಳ ಹಾರಾಟಕ್ಕೆ ವ್ಯತ್ಯಯ
ಭಾನುವಾರದವರೆಗೂ ಮುಂಗಾರು ಪೂರ್ವಮಳೆ ಮುಂದುವರೆಯಲಿದ್ದು, ಗುಡುಗು, ಸಿಡಿಲು, ಮಿಂಚಿನಿಂದ ಕೂಡಿದ ಮಳೆ ಚದುರಿದಂತೆ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಇಂದು ಮತ್ತೆ ನಾಳೆ ಕಲ್ಯಾಣ ಕರ್ನಾಟಕ ಸೇರಿದಂತೆ ಉತ್ತರ ಒಳನಾಡಿನಲ್ಲಿ ಬಹಳಷ್ಟು ಕಡೆ ಚದುರಿದಂತೆ ಮಳೆಯಾಗುವ ಮುನ್ಸೂಚನೆಗಳಿವೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ವ್ಯಾಪಕ ಮಳೆಯಾದರೆ, ಹಲವು ಭಾಗಗಳಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ತಿಳಿಸಿದ್ದಾರೆ.