ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ಕಾಂಗ್ರೆಸ್ ಶಾಸಕರೊಬ್ಬರ ಗನ್ ಮ್ಯಾನ್ ಬಂಧನ
545 ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ವಿಭಾಗದ(ಸಿಐಡಿ) ಪೊಲೀಸರು ಮಹತ್ವದ ಬೆಳವಣಿಗೆಯೊಂದರಲ್ಲಿ...
Published: 21st April 2022 04:19 PM | Last Updated: 21st April 2022 04:19 PM | A+A A-

ಆರಗ ಜ್ಞಾನೇಂದ್ರ
ಬೆಂಗಳೂರು: 545 ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ವಿಭಾಗದ(ಸಿಐಡಿ) ಪೊಲೀಸರು ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಶಾಸಕರೊಬ್ಬರ ಗನ್ ಮ್ಯಾನ್ ನನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಮಾಹಿತಿ ನೀಡಿದ್ದಾರೆ.
ಸಿಐಡಿ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಅಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ತಪ್ಪಿತಸ್ಥರನ್ನು ಬಂಧಿಸಿ, ಕಾನೂನಿನ ಕ್ರಮಕ್ಕೆ ಒಳಪಡಿಸಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.
ಇದನ್ನು ಓದಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಸಿಐಡಿ ಅಧಿಕಾರಿಗಳಿಂದ 45 ಮಂದಿ ಅಭ್ಯರ್ಥಿಗಳ ವಿಚಾರಣೆ
ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ತನಿಖೆಯು ನಿಷ್ಪಕ್ಷಪಾತವಾಗಿ ನಡೆಯುತ್ತಿದ್ದು, ಅಕ್ರಮದಲ್ಲಿ ಭಾಗಿಯಾದವರು ಎಷ್ಟೇ ದೊಡ್ಡವರಾದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಆರಗ ಜ್ಞಾನೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಇದುವರೆಗೆ 9 ಮಂದಿಯನ್ನು ಬಂಧಿಸಿದ್ದು, ಈ 9 ಮಂದಿ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗುತ್ತಿದೆ.