ಧ್ವನಿವರ್ಧಕ ನಿಯಮ ಜಾರಿಯಾಗುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಸಿ.ಟಿ.ರವಿ ಸೂಚನೆ
ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಅನುಮತಿಯಿಲ್ಲದೆ ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆಯೇ ಎಂಬುದನ್ನು ರಾಜ್ಯ ಸರ್ಕಾರ ಖಚಿತಪಡಿಸಿಕೊಳ್ಳಬೇಕೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಗುರುವಾರ ಹೇಳಿದ್ದಾರೆ.
Published: 22nd April 2022 11:41 AM | Last Updated: 22nd April 2022 01:39 PM | A+A A-

ಸಿಟಿ ರವಿ
ಬೆಂಗಳೂರು: ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಅನುಮತಿಯಿಲ್ಲದೆ ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆಯೇ ಎಂಬುದನ್ನು ರಾಜ್ಯ ಸರ್ಕಾರ ಖಚಿತಪಡಿಸಿಕೊಳ್ಳಬೇಕೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮ ಜಾರಿಗೊಳಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಅನುಮತಿಯಿಲ್ಲದೆ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವ ನಿಯಮಗಳನ್ನು ಯಾರೂ ಉಲ್ಲಂಘಿಸುವಂತಿಲ್ಲ. ಅಧಿಕಾರಿಗಳು ಈ ನಿಯಮಗಳನ್ನು ಜಾರಿಗೊಳಿಸುವುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ನಿಯಮ ಉಲ್ಲಂಘಿಸಿ ಧ್ವನಿವರ್ಧಕಗಳನ್ನು ಬಳಸುವ ಧಾರ್ಮಿಕ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಲಪಂಥೀಯ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿದ್ದು, ಅಧಿಕಾರಿಗಳು ಕ್ರಮಕೈಗೊಳ್ಳಲು ವಿಫಲವಾದರೆ, ದೇವಾಲಯಗಳು ಮತ್ತು ಮಠಗಳಲ್ಲಿ ಭಜನೆ, ಹಾಡುಗಳು ಮತ್ತು ಪ್ರಾರ್ಥನೆಗಳಿಗೆ ಸ್ಪೀಕರ್ಗಳನ್ನು ಬಳಸುವುದಾಗಿ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಮಾತನಾಡಿ, ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ರಾಜಕೀಯ ಮಾಡುತ್ತಿದ್ದು, ಬಿಜೆಪಿ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ. ಬಿಜೆಪಿ ಸರ್ಕಾರವು ಎಲ್ಲ ಧರ್ಮದ ಜನರ ಕಲ್ಯಾಣಕ್ಕಾಗಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ, ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ತಾರತಮ್ಯ, ತುಷ್ಟೀಕರಣ ರಾಜಕಾರಣ ಮಾಡಿತ್ತು ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶಗಳು ಸೇರಿದಂತೆ ಹಲವು ಸಮಾವೇಶಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧದ ಆರೋಪಗಳ ಕುರಿತು ಮಾತನಾಡಿ, ಈಶ್ವರಪ್ಪ ನೈತಿಕತೆಯ ಆಧಾರದ ಮೇಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆರೋಪಗಳಿಂದ ಶೀಘ್ರದಲ್ಲಿಯೇ ಹೊರಬರಲಿದ್ದಾರೆಂದು ಹೇಳಿದರು.