ದೆಹಲಿಗೆ ಭೇಟಿಗೆ ಸಿಎಂ ಸಿದ್ಧತೆ: ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನಕ್ಕೆ ಶುರುವಾಯ್ತು ಕಸರತ್ತು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಂಗಳಾಂತ್ಯಕ್ಕೆ ದೆಹಲಿಗೆ ಭೇಟಿ ನೀಡಲಿದ್ದು, ಸಂಪುಟ ಪುನಾರಚನೆ ಕುರಿತು ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಆಸೆಗಳು ಗರಿಗೆದರಿದೆ.
Published: 24th April 2022 08:05 AM | Last Updated: 24th April 2022 08:05 AM | A+A A-

ರಮೇಶ್ ಜಾರಕಿಹೊಳಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಂಗಳಾಂತ್ಯಕ್ಕೆ ದೆಹಲಿಗೆ ಭೇಟಿ ನೀಡಲಿದ್ದು, ಸಂಪುಟ ಪುನಾರಚನೆ ಕುರಿತು ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಆಸೆಗಳು ಗರಿಗೆದರಿದೆ.
ಇದರಂತೆ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿಯವರು ಕಸರತ್ತು ಆರಂಭಿಸಿದ್ದು, ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ್ದಾರೆಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಸಚಿವ ಸಂಪುಟ ಪುನಾರಚನೆ ಮಾಡಬೇಕೋ ಅಥವಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕೋ ಎಂಬ ಬಗ್ಗೆ ಬಿಜೆಪಿ ಕೇಂದ್ರ ನಾಯಕತ್ವ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದ್ದರು.
ಬಿಜೆಪಿ ಹೈಕಮಾಂಡ್ನಿಂದ ಸೂಚನೆ ಬರುತ್ತಿದ್ದಂತೆಯೇ ಸಚಿವರ ಪಟ್ಟಿಯನ್ನು ಬಹಿರಂಗಪಡಿಸಲಾಗುತ್ತದೆ ಎಂದು ತಿಳಿಸಿದ್ದರು.
ಏತನ್ಮಧ್ಯೆ ಸಚಿವ ಸಂಪುಟ ವಿಸ್ತರಣೆ ವರಿಷ್ಟರಿಂದ ಬೊಮ್ಮಾಯಿಯವರಿಗೆ ಬುಲಾವ್ ಬಂದಿದೆ ಎಂಬ ಉಹಾಪೋಹಗಳ ಶುರುವಾಗಿದ್ದು, ಈ ಕುರಿತ ಮಾಹಿತಿ ತಿಳಿಯುತ್ತಿದ್ದಂತೆಯೇ ರಮೇಶ್ ಜಾರಕಿಹೊಳಿಯವರು ಶನಿವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಧಾವಿಸಿದ್ದರು. ಇದೇ ವೇಳೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಲು ಪ್ರತ್ನಿಸಿದ್ದರು ಎಂದು ತಿಳಿದುಬಂದಿದೆ.
ಏಪ್ರಿಲ್ 30ರಂದು ಬೊಮ್ಮಾಯಿಯವರು ದೆಹಲಿಯಲ್ಲಿ ಕೇಂದ್ರ ನಾಯಕತ್ವವನ್ನು ಭೇಟಿ ಮಾಡಲಿದ್ದು, ಈ ವೇಳೆ ಖಾಲಿ ಉಳಿದಿರುವ 5 ಸ್ಥಾನವನ್ನು ಭರ್ತಿ ಮಾಡಲಿದ್ದಾರೆಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. ಈ ಬಾರಿ ಕನಿಷ್ಟ 8 ಸಚಿವರು ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 10 ತಿಂಗಳಷ್ಟೇ ಬಾಕಿಯಿದ್ದು, ಚುನಾವಣೆಯನ್ನು ಗಮನದಲ್ಲಿಟ್ಟುಕೊಳ್ಳುವುದಾದರೆ, ಇದು ಕೊನೆಯ ಸಂಪುಟ ಪುನಾರಚನೆಯಾಗಿರಲಿದೆ ಎಂದು ಹೇಳಲಾಗುತ್ತಿದೆ.