ರಾಜ್ಯದ ಎಲ್ಲ ಶಾಲೆ, ಪಿಯು ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡಿ ಸರ್ಕಾರ ಆದೇಶ
ರಾಜ್ಯದ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯ ವೇಳೆ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Published: 18th August 2022 04:45 PM | Last Updated: 18th August 2022 04:45 PM | A+A A-

ರಾಷ್ಟ್ರ ಧ್ವಜ
ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯ ವೇಳೆ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಗಸ್ಟ್ 17 ರ ಈ ಆದೇಶವು ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.
ಇದನ್ನು ಓದಿ: ರಾಷ್ಟ್ರಗೀತೆ ಹಾಡೋದನ್ನ ಮುತಾಲಿಕ್ ಹೇಳಿಕೊಡಬೇಕಾ?: ಜಮೀರ್ ಅಹ್ಮದ್ ಖಾನ್
ಆದೇಶದ ಪ್ರಕಾರ, ಈ ಬಗ್ಗೆ ಸರ್ಕಾರದ ಆದೇಶ ಜಾರಿಯಲ್ಲಿದ್ದರೂ, ಬೆಂಗಳೂರಿನ ಕೆಲವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬೆಳಗ್ಗೆ ಪ್ರಾರ್ಥನೆಯ ಸಮಯದಲ್ಲಿ ರಾಷ್ಟ್ರಗೀತೆಯ ಸಾಮೂಹಿಕ ಗಾಯನವನ್ನು ಅಭ್ಯಾಸ ಮಾಡುತ್ತಿಲ್ಲ ಮತ್ತು ಈ ಬಗ್ಗೆ ಸರ್ಕಾರಕ್ಕೆ ದೂರುಗಳು ಬಂದಿವೆ.
ದೂರುಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಉತ್ತರ ಮತ್ತು ದಕ್ಷಿಣ ವಿಭಾಗದ ಉಪನಿರ್ದೇಶಕರು ಸಂಬಂಧಪಟ್ಟ ಶಾಲೆಗಳಿಗೆ ಭೇಟಿ ನೀಡಿ ಬೆಳಗ್ಗೆ ಪ್ರಾರ್ಥನೆಯಲ್ಲಿ ರಾಷ್ಟ್ರಗೀತೆ ಹಾಡುವ ಕಾರ್ಯ ನಡೆಯುತ್ತಿಲ್ಲ ಎಂದು ಖಚಿತಪಡಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಪ್ರಕಾರ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ. ಕೆಲವು ಶಾಲೆಗಳಲ್ಲಿ ನಿಯಮ ಉಲ್ಲಂಘಿಸಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಅದಕ್ಕೆ ಅವಕಾಶ ನೀಡಬಾರದು ಎಂದು ತಾಕೀತು ಮಾಡಲಾಗಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಮೈದಾನದ ಕೊರತೆ ಇದ್ದರೆ, ಕೊಠಡಿಗಳಲ್ಲೇ ರಾಷ್ಟ್ರಗೀತೆ ಹಾಡಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.