‘ಧರ್ಮ ಒಡೆಯುವ ಪ್ರಯತ್ನ ಮಾಡಿರಲಿಲ್ಲ, ಕೆಲವರು ನನ್ನ ದಾರಿ ತಪ್ಪಿಸಿದ್ದರು': ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚಾತ್ತಾಪ!

ತಮ್ಮ ಸರ್ಕಾರದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಚಳವಳಿ ಆರಂಭಿಸಿದ್ದಕ್ಕೆ  ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮಿ ಹೇಳಿದ್ದಾರೆ.
ರಂಭಾಪುರಿ ಜಗದ್ಗುರುಗಳೊಂದಿಗೆ ಸಿದ್ದರಾಮಯ್ಯ
ರಂಭಾಪುರಿ ಜಗದ್ಗುರುಗಳೊಂದಿಗೆ ಸಿದ್ದರಾಮಯ್ಯ

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಮಠಕ್ಕೆ ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಟ್ಟ ಮೊದಲ ಬಾರಿಗೆ ಭೇಟಿ ನೀಡಿದರು. ತಮ್ಮ ಸರ್ಕಾರದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಚಳವಳಿ ಆರಂಭಿಸಿದ್ದಕ್ಕೆ  ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಂಭಾಪುರಿ ಪೀಠದ ಪ್ರಸನ್ನ ವೀರ ಸೋಮೇಶ್ವರ ಸ್ವಾಮೀಜಿ ಅವರು, ‘ಧರ್ಮ ಒಡೆಯುವ ಪ್ರಯತ್ನ ಮಾಡಿರಲಿಲ್ಲ. ಕೆಲವರು ನನ್ನ ದಾರಿ ತಪ್ಪಿಸಿದ್ದರು. ಅದರಿಂದಾಗಿ ನನಗೆ ಖಂಡಿತವಾಗಿಯೂ ಪಶ್ಚಾತ್ತಾಪವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು’ ಎಂದು ತಿಳಿಸಿದರು.

‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವೀರಶೈವ ಧರ್ಮದಿಂದ ಲಿಂಗಾಯತ ಧರ್ಮ ಒಡೆಯುವುದಕ್ಕೆ ಕುಮ್ಮಕ್ಕು ನೀಡಿದ ಆರೋಪ ಅವರ ಮೇಲಿತ್ತು. ಈ ಬಗ್ಗೆ ಅವರ ಮನಸ್ಸಿನಲ್ಲಿದ್ದ ದುಗುಡವನ್ನು ಪ್ರಾಂಜಲ ಮನಸ್ಸಿನಿಂದ ಬಿಚ್ಚಿಟ್ಟಿದ್ದಾರೆ. ಧರ್ಮದ ವಿಚಾರದಲ್ಲಿ ಯಾವತ್ತೂ ಆವೇಶ ಮಾಡುವುದಿಲ್ಲ. ರಾಜ್ಯದ ಅಭಿವೃದ್ಧಿ, ಜನರ ಕಲ್ಯಾಣವನ್ನು ಗುರಿಯಾಗಿಟ್ಟುಕೊಂಡು ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ’ ಎಂದರು.

ಇನ್ನೂ ಮುಂದೆ ಧರ್ಮಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ, ರಾಜ್ಯದ ಅಭಿವೃದ್ಧಿಗೆ ಶ್ರಮಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಸ್ವಾಮೀಜಿ ತಿಳಿಸಿದರು.

ರಾಯಚೂರಿನ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡಾಗ ಮಠಕ್ಕೆ ಆಹ್ವಾನಿಸಿದ್ದೆ ಎಂದು ಸ್ವಾಮೀಜಿ ತಿಳಿಸಿದರು.

ಸಿದ್ದರಾಮಯ್ಯ ಅವರು ಆಗಾಗ್ಗೆ ಶೃಂಗೇರಿ ಭೇಟಿಯ ಬಗ್ಗೆ ಕೇಳಿದ್ದೆ. ಆದರೆ ಅವರು ಇದುವರೆಗೆ ರಂಭಾಪುರಿ ಪೀಠಕ್ಕೆ ಭೇಟಿ ನೀಡಿರಲಿಲ್ಲ, ಹಾಗಾಗಿ ಆಶೀರ್ವಾದ ಪಡೆಯಲು ಅವರನ್ನು ಮಠಕ್ಕೆ ಆಹ್ವಾನಿಸಿದ್ದೆ ಎಂದು ತಿಳಿಸಿದ್ದಾರೆ.

‘ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಅಮಾಯಕರ ಪ್ರಾಣಗಳು ಹರಣವಾಗಬಾರದು. ಸರ್ವಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ಅವರ ಮಾತಿನಂತೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಎಲ್ಲಾ ಜನಾಂಗದವರೂ ಕೂಡಿ ಬಾಳಲು ಪೂರಕವಾದ ವಾತಾವರಣ ನಿರ್ಮಾಣ ಮಾಡುವುದು ಎಲ್ಲ ರಾಜಕಾರಣಿಗಳ ಗುರಿಯಾಗಬೇಕು.

ಮಾತಿನ ಶೈಲಿಯಲ್ಲಿ ಮೃದು ಧೋರಣೆ ಇರಲಿ ಎಂದು ಸಲಹೆ ನೀಡಿದ್ದೇನೆ’ ಎಂದು ಸ್ವಾಮೀಜಿ ಹೇಳಿದರು. ಮಠವು ಎಲ್ಲಾ ಪಕ್ಷದ ನಾಯಕರನ್ನು ಸಮಾನವಾಗಿ ಪರಿಗಣಿಸುತ್ತದೆ ಎಂದು ಮಠಾಧೀಶರು ಹೇಳಿದರು. ಕಾಶಿಯಿಂದ ತಂದಿದ್ದ ಸಣ್ಣ ರುದ್ರಾಕ್ಷಿ ಹಾರವನ್ನು ಸಿದ್ದರಾಮಯ್ಯ ಅವರ ಕೊರಳಿಗೆ ಹಾಕಿದ ಶ್ರೀಗಳು, ‘ಇದನ್ನು ಕಾಶಿಯಿಂದ ತಂದಿದ್ದು ಚುನಾವಣೆವರೆಗೂ ಹಾಕಿಕೊಳ್ಳಿ’ ಎಂದು ಸಲಹೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com