ಶಶಿಕಲಾ ಜೊಲ್ಲೆ(ಸಂಗ್ರಹ ಚಿತ್ರ)
ಶಶಿಕಲಾ ಜೊಲ್ಲೆ(ಸಂಗ್ರಹ ಚಿತ್ರ)

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ

ವಕ್ಫ್ ಮಂಡಳಿಯಿಂದ ರಾಜ್ಯದಲ್ಲಿ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ಮತ್ತು ಸಮಾಜದ ವಿವಿಧ ವರ್ಗಗಳಿಂದ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತವಾಗುತ್ತಿದ್ದಂತೆ ಸರ್ಕಾರ ನಿರ್ಧಾರದಿಂದ ಹಿಂದೆ ಸರಿಯುತ್ತದೆಯೇ ಎಂಬ ಅನುಮಾನ ದಟ್ಟವಾಗಿದೆ.
Published on

ಬೆಂಗಳೂರು: ವಕ್ಫ್ ಮಂಡಳಿಯಿಂದ ರಾಜ್ಯದಲ್ಲಿ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ಮತ್ತು ಸಮಾಜದ ವಿವಿಧ ವರ್ಗಗಳಿಂದ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತವಾಗುತ್ತಿದ್ದಂತೆ ಸರ್ಕಾರ ನಿರ್ಧಾರದಿಂದ ಹಿಂದೆ ಸರಿಯುತ್ತದೆಯೇ ಎಂಬ ಅನುಮಾನ ದಟ್ಟವಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಇಂದು ವಕ್ಫ್ ಮತ್ತು ಹಜ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ,‘ಮುಸ್ಲಿಂ ಹೆಣ್ಣುಮಕ್ಕಳಿಗೆ ವಿಶೇಷ ಕಾಲೇಜು ತೆರೆಯುವ ಬಗ್ಗೆ ನಾನು ಇಂಥ ಯಾವುದೇ ಭರವಸೆ ಕೊಟ್ಟಿಲ್ಲ. ವಕ್ಫ್ ಮಂಡಳಿಯು ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಹಲವು ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ವಕ್ಫ್ ಮಂಡಳಿಯು ಒಂದು ನಿರ್ದಿಷ್ಟ ಸಮುದಾಯಕ್ಕಾಗಿ ಶಿಕ್ಷಣ ಸಂಸ್ಥೆ ಆರಂಭಿಸುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ’ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸಚಿವೆ ಸ್ಮೃತಿ ಇರಾನಿಯವರನ್ನು ವಕ್ಫ್ ಮಂಡಳಿ ಅಧ್ಯಕ್ಷರಿಗೆ ಭೇಟಿ ಮಾಡಲು ನಮ್ಮ ವೈಯಕ್ತಿಕ ಅಧಿಕಾರಿ ಸಹಾಯ ಮಾಡಿರಬಹುದು. ಅಲ್ಲಿ ಅವರು ಏನು ಚರ್ಚೆ ಮಾಡಿದ್ದಾರೆಯೋ ನನಗೆ ಗೊತ್ತಿಲ್ಲ. ಆದರೆ ಈ ಬಗ್ಗೆ ಸಿಎಂ ಅವರ ಜೊತೆ ನಾನು ಚರ್ಚೆ ನಡೆಸಿಲ್ಲ ಎಂದರು. ಈ ಬಗ್ಗೆ ಇಂದು ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮ ಪ್ರಕಟಣೆಯನ್ನು ಕೂಡ ಹೊರಡಿಸಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ವಕ್ಫ್ ಮಂಡಳಿ ಅಧ್ಯಕ್ಷ ಶಾ ಸಅದಿ, ‘ನನ್ನ ಪೂರ್ಣ ಹೇಳಿಕೆಯನ್ನು ಮಾಧ್ಯಮಗಳು ಪ್ರಸಾರ ಮಾಡಿಲ್ಲ. ಕೇವಲ ಮುಸ್ಲಿಂ ಮಹಿಳೆಯರಿಗೆ ಮಾತ್ರವೇ ಕಾಲೇಜು ಆರಂಭಿಸುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚುತ್ತಿವೆ. ವಕ್ಫ್ ಮಂಡಳಿಯಿಂದ ಈಗಾಗಲೇ 112 ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇವು ಸರ್ಕಾರದ ಶಿಕ್ಷಣ ಇಲಾಖೆಯ ನಿಯಮಗಳ ಪ್ರಕಾರವೇ ಕೆಲಸ ಮಾಡುತ್ತಿವೆ. ಪ್ರಸ್ತಾಪಿತ ಕಾಲೇಜುಗಳು ಸಹ ಇದೇ ಮಾದರಿಯಲ್ಲಿ ಕೆಲಸ ಮಾಡುತ್ತವೆ. ಪ್ರಸ್ತಾಪಿತ ಕಾಲೇಜುಗಳಿಗೂ ಹಿಜಾಬ್, ಧರ್ಮದಂಗಲ್ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರೊಂದಿಗೂ ನಾನು ಚರ್ಚಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯ ಆಶಯಕ್ಕೆ ತಕ್ಕಂತೆ ಈ ಯೋಜನೆಗಳಿವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com