'ನೈತಿಕ ಪೋಲೀಸ್ ಗಿರಿ' ಪ್ರಕರಣಗಳು ಹೆಚ್ಚಾಗುತ್ತಿದ್ದು, ಸ್ವತಃ ಮುಖ್ಯಮಂತ್ರಿಗಳೇ ಅದಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ: ಸಿದ್ದರಾಮಯ್ಯ

ನೈತಿಕ ಪೊಲೀಸ್ ಗಿರಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಇದಕ್ಕೆ ಬೆಂಬಲ ನೀಡುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. 
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ

ಮಂಗಳೂರು: ನೈತಿಕ ಪೊಲೀಸ್ ಗಿರಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಇದಕ್ಕೆ ಬೆಂಬಲ ನೀಡುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. 

ಮಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ 2 ತಿಂಗಳಿನಿಂದ ಇಂತಹ ಏಳೆಂಟು ನೈತಿಕ ಪೊಲೀಸ್ ಗಿರಿ ಘಟನೆಗಳು ಆಗಿವೆ. ಇದನ್ನು ಖಂಡಿಸುತ್ತೇನೆ. ನೈತಿಕ ಪೊಲೀಸ್ ಗಿರಿ ಮಾಡುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಕಾನೂನಿನಲ್ಲಿ ಎಲ್ಲಿದೆ ಅಂತಹ ಅವಕಾಶ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಯವರಿಗೆ ಕಾನೂನಿನ ಬಗ್ಗೆ, ಭಾರತೀಯ ದಂಡ ಸಂಹಿತೆಯ ಬಗ್ಗೆ ಅರಿವಿದೆಯೇ, ಪೊಲೀಸ್ ನವರನ್ನು ಇಟ್ಟುಕೊಂಡಿರುವುದು ಏಕೆ, ಇಂತಹ ಘಟನೆಗಳು ಆಗುವುದನ್ನು ತಪ್ಪಿಸಬೇಕಲ್ಲವೇ ಎಂದು ಕೇಳಿದರು.

ಕಾನೂನು ಸುವ್ಯವಸ್ಥೆಯಲ್ಲಿ ಬೇರೆಯವರು ಅನಗತ್ಯವಾಗಿ ಮಧ್ಯಪ್ರವೇಶಿಸುವವರು ಖಂಡನೀಯ, ಅದಕ್ಕೆ ಸರ್ಕಾರ ಅವಕಾಶ ಮಾಡಿಕೊಡಬಾರದು. ಕ್ರಿಯೆಗೆ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಪ್ರಚೋದನೆ ಕೊಡುವ ರೀತಿಯಲ್ಲಿ ಮುಖ್ಯಮಂತ್ರಿಗಳು ಹೇಳಿಕೆ ನೀಡುವುದು ಸರಿಯಲ್ಲ ಎಂದರು. 

ಕೊಲೆ ಮಾಡಿದರೆ ಇಲ್ಲೊಂದು ಕೊಲೆ ಮಾಡಬೇಕು ಎಂಬ ಕಾನೂನು ಎಲ್ಲಾದರೂ ಇದೆಯೇ, ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ, ಭಯೋತ್ಪಾದನೆಗೆ ಬೆಂಬಲ ನೀಡುತ್ತೇವೆ ಎಂದು ಅವರು ಹೇಳಿಲ್ಲ. ಬಿಜೆಪಿಯವರು ಅದನ್ನು ಅವರ ಅನುಕೂಲಕ್ಕೆ ತಕ್ಕಂತೆ ಜನರ ಮುಂದೆ ತಪ್ಪು ಮಾಹಿತಿ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಡಬಲ್ ಎಂಜಿನ್ ಸರ್ಕಾರವಿದೆ. ಭಯೋತ್ಪಾದನೆಯನ್ನು ಹತ್ತಿಕ್ಕಲಿ, ಕೇಂದ್ರದಲ್ಲಿ 9 ವರ್ಷವಾಗುತ್ತಾ ಬಂತು ಅಧಿಕಾರಕ್ಕೆ ಬಂದು, ಜನ ಏಕೆ ಅಧಿಕಾರಕ್ಕೆ ಕೊಟ್ಟಿದ್ದಾರೆ. ಕೇವಲ ಭಾವನಾತ್ಮಕ ವಿಷಯಗಳನ್ನು ಜನರ ಮುಂದಿಡುವುದಲ್ಲ, ಕೆಲಸ ಮಾಡಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com