
ಚೆನ್ನವೀರ ಕಣವಿ
ಧಾರವಾಡ: ಕನ್ನಡದ ಖ್ಯಾತ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರು ನಿಧನರಾಗಿದ್ದು, ಅವರಿಗೆ 93 ವರ್ಷ ವಯಸ್ಸಾಗಿತ್ತು.
Noted Kannada poet Channaveera Kanavi passed away at Dharwad. He was 93 years@NewIndianXpress @santwana99 pic.twitter.com/cc0TQompmB
— TNIE Karnataka (@XpressBengaluru) February 16, 2022
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಣವಿ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಬುಧವಾರ ಬೆಳಗ್ಗೆ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕವಿ ನಾಡೋಜ ಡಾ.ಚನ್ನವೀರ ಕಣವಿ(Poet Chennaveera Kanavi) ಅವರು ಕಳೆದೊಂದು ತಿಂಗಳಿನಿಂದ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ನಿಂದ ಸಂಪೂರ್ಣ ಗುಣಮುಖರಾಗಿದ್ದ ಅವರು ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು.
ಜೂನ್ 28,1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿಯವರು ಜನಿಸಿದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿ ಪಡೆದರು. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಸಂಗ ಪ್ರಸರಣ ಮತ್ತು ಪ್ರಕಟಣಾ ವಿಭಾಗದ ಕಾರ್ಯದರ್ಶಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ಭಾವಜೀವಿ, ಸಮನ್ವಯ ಕವಿ ಎಂದೇ ಅವರು ಖ್ಯಾತಿಗಳಿಸಿದ್ದರು.
1949ರಲ್ಲಿ ಡಾ. ಚನ್ನವೀರ ಕಣವಿ ಮೊದಲ ಕವಲ ಸಂಕಲನ ಕಾವ್ಯಾಕ್ಷಿ ಬಿಡುಗಡೆಗೊಂಡಿತು. ಭಾವಜೀವಿ, ಆಕಾಶಬುಟ್ಟಿ, ಮಣ್ಣಿನ ಮೆರವಣಿಗೆ, ನೆಲಮುಗಿಲು, ಜೀವಧ್ವನಿ ಮುಂತಾದ ಕವನ ಸಂಕಲನಗಳನ್ನು ಅವರು ರಚಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಅನಕೃ ಪ್ರತಿಷ್ಠಾನ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಹಾಸನದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹಂಪಿ ವಿಶ್ವವಿದ್ಯಾಲಯ ನಾಡೋಜ ಪ್ರಶಸ್ತಿ ನೀಡಿ ಗೌರವಿಸಿದೆ. ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.