ಪೌರಕಾರ್ಮಿಕರ ಸಮಸ್ಯೆಗಳಿಗೆ ಮಾನವೀಯ ಸ್ಪಂದನೆಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೊಮ್ಮಾಯಿ ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ಮಾತನಾಡಿದ ಅವರು, 'ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ ಸರ್ಕಾರ ಒಪ್ಪಿಕೊಂಡಿದೆ. ಕಾನೂನಾತ್ಮಕ ವಾಗಿ ಹಾಗೂ ತಾಂತ್ರಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪೌರಕಾರ್ಮಿಕರ ಹಾಗೂ ಅಧಿಕಾರಿಗಳ ಜಂಟಿ ಸಮಿತಿಯನ್ನು ರೂಪಿಸಲಾಗಿದೆ ಎಂದು ಹೇಳಿದರು.

ಅಂತೆಯೇ ಸಮಿತಿ ಶಿಫಾರಸ್ಸು ಮಾಡಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಲಾಗುವುದು. ಪೌರಕಾರ್ಮಿಕರ ಸಂರಕ್ಷಣೆಗೆ ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲ ದೃಷ್ಟಿಯಿಂದ ಖಾಯಂ ಆಗಿ ಸುರಕ್ಷತೆ ನೀಡಲು ಒಪ್ಪಲಾಗಿದೆ. ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು. ಸೌಹಾರ್ದತೆಯಿಂದ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುತ್ತಿದ್ದು, ನಾಳೆ ಸಂಜೆ ಹಿಂತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com