ಕರಾವಳಿ ಭಾಗದಲ್ಲಿ ಮುಂದುವರಿದ ಧಾರಾಕಾರ ಮಳೆ: ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ, ಶಾಲಾ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡದಲ್ಲಿ ಗುರುವಾರ ಸಹ ಧಾರಾಕಾರ ಮಳೆ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 9 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಗುರುವಾರ ಸಹ ಧಾರಾಕಾರ ಮಳೆ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 9 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಲ್ಲದೆ ಕರಾವಳಿ ಭಾಗದಲ್ಲಿ ಭಾರೀ ಗಾಳಿ ಬೀಸಲಿದ್ದು, ಮಂಗಳೂರಿನಿಂದ ಕಾರವಾರ ಸಮುದ್ರದವರೆಗೆ ಭಾರಿ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಗುರುವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಜಿಲ್ಲೆಯಲ್ಲಿ ಮೂಡಬಿದರೆಯಲ್ಲಿ ಅತಿಹೆಚ್ಚು ಮಳೆ ನಂತರ ಬೆಳ್ತಂಗಡಿ ತಾಲ್ಲೂಕಿನಲ್ಲಿ ಸಾಕಷ್ಟು ಮಳೆಯಾಗಿದೆ. ನೇತ್ರಾವತಿ ನದಿ ನೀರಿನ ಮಟ್ಟ ಅಪಾಯದ ಮಟ್ಟ ದಾಟಿದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ಮೂರು ಜಿಲ್ಲೆಗಳಲ್ಲಿ 204 ಮಿಲಿ ಮೀಟರ್ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆ ಬುಧವಾರ ಮರೋಳಿ ಎಂಬಲ್ಲಿ ಮನೆಯೊಂದರ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದ್ದು, ಕಿನ್ಯ ಗ್ರಾಮದ ಮನೆಯೊಂದಕ್ಕೆ ಗುಡ್ಡ ಕುಸಿದು ಹಾನಿಯಾಗಿದೆ. ಫಜೀರ್ ಗ್ರಾಮದಲ್ಲಿ ಭೂಕುಸಿತದಿಂದ ಅಡಿಕೆ ತೋಟಗಳಿಗೆ ಹಾನಿಯಾಗಿದೆ. ಸೋಮೇಶ್ವರದಲ್ಲಿ ನೀರಿನ ಬಾವಿ ಕುಸಿದಿದೆ. ಮೂಡುಬಿದಿರೆಯಲ್ಲಿ ಎಂಐಟಿಇ ಇಂಜಿನಿಯರಿಂಗ್ ಕಾಲೇಜಿನ ಕಾಂಪೌಂಡ್ ಗೋಡೆ ಕುಸಿದಿದ್ದು, ಕೆಲವು ಕಾರುಗಳಿಗೆ ಹಾನಿಯಾಗಿದೆ. ಬೆಳ್ತಂಗಡಿ ಸರಕಾರಿ ಶಾಲೆಯ ಕಾಂಪೌಂಡ್ ಗೋಡೆ ಕುಸಿದಿದೆ. ಪಣಂಬೂರಿನಲ್ಲಿ ಕಡಲ್ಕೊರೆತ ತೀವ್ರಗೊಂಡ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ 250 ಮರಳು ಚೀಲಗಳ ವ್ಯವಸ್ಥೆ ಮಾಡಿದರು.

ಮಳೆ ಪೀಡಿತ ಪ್ರದೇಶಗಳ ಡಿಸಿಗಳೊಂದಿಗೆ ಸಿಎಂ ಚರ್ಚೆ: ಕರಾವಳಿ ಭಾಗ, ಕೊಡಗು ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಕ್ಷಣಾ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಕೂಡಲೇ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. “ನಾನು ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಈಗಾಗಲೇ ರಕ್ಷಣಾ ಕಾರ್ಯಗಳು ಪ್ರಗತಿಯಲ್ಲಿದ್ದು, ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com