ವೈಯಕ್ತಿಕ ಸೋಷಿಯಲ್ ಮೀಡಿಯಾ ಖಾತೆಗೆ ಶಿಕ್ಷಣ ಸಚಿವ ನಾಗೇಶ್ ಸರ್ಕಾರದ ಹಣವನ್ನು ಬಳಸಿಕೊಳ್ಳುತ್ತಿದ್ದಾರೆ: ಕಾಂಗ್ರೆಸ್ ಆರೋಪ

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬೆಂಗಳೂರಿನ ಖಾಸಗಿ ಸಂಸ್ಥೆಯನ್ನು ಬಳಸಿಕೊಂಡು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ಇದಕ್ಕೆ ಸರ್ಕಾರದಿಂದ ಹಣವನ್ನು ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಶಿಕ್ಷಣ ಸಚಿವ ಬಿ ಸಿ ನಾಗೇಶ್(ಸಂಗ್ರಹ ಚಿತ್ರ)
ಶಿಕ್ಷಣ ಸಚಿವ ಬಿ ಸಿ ನಾಗೇಶ್(ಸಂಗ್ರಹ ಚಿತ್ರ)

ಬೆಂಗಳೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬೆಂಗಳೂರಿನ ಖಾಸಗಿ ಸಂಸ್ಥೆಯನ್ನು ಬಳಸಿಕೊಂಡು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ಇದಕ್ಕೆ ಸರ್ಕಾರದಿಂದ ಹಣವನ್ನು ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಶಿಕ್ಷಣ ಸಚಿವ ನಾಗೇಶ್ ಅವರು Poll Analytics ಸಂಸ್ಥೆಯ ಸೇವೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಹಾಗೂ ಮಾಜಿ MLC ರಮೇಶ್ ಬಾಬು ಆರೋಪಿಸಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರುವ ಖಾಸಗಿ ಕಂಪೆನಿಯೊಂದಕ್ಕೆ ತಮ್ಮ ವೈಯಕ್ತಿಕ ಸಾಮಾಜಿಕ ಖಾತೆಗಳನ್ನು ನಿರ್ವಹಿಸಲು ಮತ್ತು ಬಿಜೆಪಿಯ ಅಭಿಪ್ರಾಯ, ಆಲೋಚನೆಗಳನ್ನು ಪ್ರಚಾರ ಮಾಡಲು ಉಸ್ತುವಾರಿ ವಹಿಸಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. 

ಸಚಿವರು ಖಾಸಗಿ ಕಂಪನಿಯ ಸೇವೆಗೆ ತಿಂಗಳಿಗೆ 94 ಸಾವಿರ ರೂಪಾಯಿ ನೀಡುತ್ತಿದ್ದು, ಅದಕ್ಕೆ ಸರ್ಕಾರದಿಂದ ಹಣ ನೀಡಲಾಗುತ್ತಿದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ. ಕಳೆದ ಎರಡು ತ್ರೈಮಾಸಿಕಗಳಲ್ಲಿ ಒಟ್ಟು 5 ಲಕ್ಷ ರೂಪಾಯಿಗಳನ್ನು ಪಾವತಿಸಲಾಗಿದೆ. ಕರ್ನಾಟಕ ಪರೀಕ್ಷಾ ಮಂಡಳಿಯಿಂದ ಚೆಕ್ ಮೂಲಕ ಪಾವತಿಗಳನ್ನು ಮಾಡಲಾಗಿದೆ ಎಂದು ರಮೇಶ್ ಬಾಬು ಆರೋಪಿಸಿದ್ದಾರೆ. 

ಈ ಕುರಿತು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂಸ್ಥೆಯನ್ನು ಶಿಕ್ಷಣ ಇಲಾಖೆ ಕಾರ್ಯಕ್ಕೆ ಮಾತ್ರ ಬಳಸಿಕೊಂಡಿದ್ದರೆ ಯಾವುದೇ ಸಮಸ್ಯೆ ಇರುತ್ತಿರಲಿಲ್ಲ. ಆದರೆ ಸಚಿವರು ವೈಯಕ್ತಿಕ ಸಾಮಾಜಿಕ ಮಾಧ್ಯಮ ಖಾತೆಯನ್ನು ನಿರ್ವಹಿಸಲು ಮತ್ತು ಪಕ್ಷದ ವಿಚಾರಗಳನ್ನು ಪ್ರಚಾರ ಮಾಡಲು ಇಲಾಖೆಯ ಹಣವನ್ನು ಸಂಸ್ಥೆಗೆ ಪಾವತಿಸಲು ಬಳಸುವುದು ಸರಿಯೇ, ರಾಜ್ಯ ಸರ್ಕಾರ ಈ ಬಗ್ಗೆ ತನಿಖೆ ನಡೆಸಿ ಸಚಿವರಿಂದ ಸರ್ಕಾರಕ್ಕೆ ಹಣವನ್ನು ಹಿಂತಿರುಗಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. 

ಈ ಬಗ್ಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರನ್ನು ಕೇಳಿದರೆ, ಇದಕ್ಕೆ ಯಾವುದೇ ಪುರಾವೆಗಳಿಲ್ಲ, ರಮೇಶ್ ಬಾಬು ಅವರು ಮಾಡುತ್ತಿರುವುದು ರಾಜಕೀಯ ಹೇಳಿಕೆಯಷ್ಟೆ, ನನ್ನ ಮೇಲಿನ ಆರೋಪವನ್ನು ನಿರಾಕರಿಸುತ್ತೇನೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com