ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಹೈ ಅಲರ್ಟ್
ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ ಮೊಹಮ್ಮದ್ ಪೈಗಂಬರ್ ಬಗ್ಗೆ ನೀಡಿದ್ದ ಹೇಳಿಕೆಯ ಕಿಚ್ಚು ದೇಶವ್ಯಾಪಿ ಹಬ್ಬುತ್ತಿದೆ. ಮುಸ್ಲಿಂ ಸಮುದಾಯ ಬೀದಿಗಿಳಿದು ಪ್ರತಿಭಟನೆಗಳನ್ನು ಮಾಡಿ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸುತ್ತಿವೆ. ಕೆಲವು ರಾಜ್ಯಗಳಲ್ಲಿ ಸಿಕ್ಕ ಸಿಕ್ಕ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ...
Published: 11th June 2022 08:19 AM | Last Updated: 11th June 2022 03:05 PM | A+A A-

ಬಿಜೆಪಿ ನಾಯಕರ ಹೇಳಿಕೆಗಳ ವಿರುದ್ಧ ಶುಕ್ರವಾರ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಬೆಂಗಳೂರು: ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ ಮೊಹಮ್ಮದ್ ಪೈಗಂಬರ್ ಬಗ್ಗೆ ನೀಡಿದ್ದ ಹೇಳಿಕೆಯ ಕಿಚ್ಚು ದೇಶವ್ಯಾಪಿ ಹಬ್ಬುತ್ತಿದೆ. ಮುಸ್ಲಿಂ ಸಮುದಾಯ ಬೀದಿಗಿಳಿದು ಪ್ರತಿಭಟನೆಗಳನ್ನು ಮಾಡಿ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸುತ್ತಿವೆ. ಕೆಲವು ರಾಜ್ಯಗಳಲ್ಲಿ ಸಿಕ್ಕ ಸಿಕ್ಕ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರವು ರಾಜ್ಯದಲ್ಲಿ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಬಿಜೆಪಿಯ ನಾಯಕಿ ನೂಪುರ್ ಶರ್ಮಾ ಖಾಸಗಿ ಸುದ್ದಿವಾಹಿಯ ಚರ್ಚೆಯ ಸಂದರ್ಭದಲ್ಲಿ ಮಹಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾದ ಹೇಳಿಕೆ ನೀಡಿರುವುದು ಮುಸ್ಲಿಂ ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಬಿಜೆಪಿ ನಾಯಕರ ಹೇಳಿಕೆಗೆ ವಿರೋಧ ಹಾಗೂ ಖಂಡನೆಗಳು ವ್ಯಕ್ತವಾಗುತ್ತಿವೆ.
ಇದನ್ನೂ ಓದಿ: ಪ್ರವಾದಿ ವಿರುದ್ಧ ಹೇಳಿಕೆ ವಿವಾದ: ರಾಂಚಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಇಬ್ಬರ ಸಾವು
ಇದೀಗ ದೇಶದಲ್ಲಿಯೂ ಕಿಚ್ಚು ಹೆಚ್ಚಾಗಿದ್ದು, ಎಲ್ಲೆಡೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಉತ್ತರಪ್ರದೇಶ, ದೆಹಲಿ, ತಲಂಗಾಣ, ಮಹಾರಾಷ್ಟ್ರ ಸೊಲ್ಲಾಪುರ ಸೇರಿದಂತೆ ದೇಶದ ಹಲವೆಡೆ ಸಾವಿರಾರು ಮುಸ್ಲಿಂ ಸಮುದಾಯದ ಜನರು ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ, ಕೋಮು ಹಿಂಸಾಚಾರ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವ ಯಾವುದೇ ಭದ್ರತಾ ಉಲ್ಲಂಘನೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಲ್ಲಾ ಘಟಕದ ಅಧಿಕಾರಿಗಳು ಮತ್ತು ಪೊಲೀಸ್ ಠಾಣೆಗಳಿಗೆ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿ ಪ್ರತಿಭಟನೆ ನಡೆಯುವ, ಗಲಭೆಗಳು ಸೃಷ್ಟಿಯಾಗುವ ಕುರಿತು ಗುಪ್ತಚರಗಳಿಂದ ಯಾವುದೇ ಮಾಹಿತಿಗಳೂ ಬಂದಿಲ್ಲ. ಆದರೆ, ದೇಶದ ಇತರೆಡೆ ಪ್ರತಿಭಟನೆ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕ್ರಮಗಳ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರವಾದಿ ಕುರಿತು ಹೇಳಿಕೆ: ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ದೇಶದ ಹಲವೆಡೆ ಪ್ರತಿಭಟನೆ, ಹಿಂಸಾಚಾರ, ಅಶ್ರುವಾಯು ಪ್ರಯೋಗ
ಈ ನಡುವೆ ಜೂನ್ 20 ಮತ್ತು 21 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿಯೂ ಎಲ್ಲೆಡೆ ಭದ್ರತೆ ಬಿಗಿಗೊಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪ್ರವಾದಿ ಅವಮಾನಿಸಿದ್ದಕ್ಕಾಗಿ ಅಲ್ ಖೈದಾ ಈ ಹಿಂದೆ ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸುವ ಬೆದರಿಕೆಯನ್ನೊಡ್ಡಿದೆ. ಈ ಹಿನ್ನೆಲೆಯಲ್ಲಿಯೂ ಪೊಲೀಸರು ಎಲ್ಲೆಡೆ ಕಣ್ಗಾವಲನ್ನು ಹೆಚ್ಚಿಸಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ವಿಜಯಪುರ, ಗದಗ ಮತ್ತು ಹೊಸಪೇಟೆ ಜಿಲ್ಲೆಗಳಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಮತ್ತು ವಿವಿಧ ಮುಸ್ಲಿಂ ಸಂಘಟನೆಗಳ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ನೂಪುರ್ ಶರ್ಮಾ ಮತ್ತು ಜಿಂದಾಲ್ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಇದನ್ನೂ ಓದಿ: ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ಜಾಮಾ ಮಸೀದಿ ಹೊರಗಡೆ ಪ್ರತಿಭಟನೆ, 30 ಮಂದಿ ಆರೆಸ್ಟ್
ಸಿಎಂ ಬೊಮ್ಮಾಯಿ ತುರ್ತು ಸಭೆ, ಕಟ್ಟೆಚ್ಚರಕ್ಕೆ ಸೂಚನೆ
ದೇಶದಾದ್ಯಂತ ಪ್ರತಿಭಟನೆ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದು, ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ.
ನಿನ್ನೆ ಮಧ್ಯಾಹ್ನ ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಗಳು, ರಾಜ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡರು. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಂತಿ ಭಂಗ ಉಂಟಾಗದಂತೆ ಮುಂಜಾಗ್ರತೆ ವಹಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ಹೆಚ್ಚಳ ಮಾಡಬೇಕು. ಠಾಣಾ ಮಟ್ಟದಲ್ಲಿ ಶಾಂತಿ ಸಭೆ ನಡೆಸಿ ಸಹನೆಯಿಂದ ವರ್ತಿಸುವಂತೆ ಸಮುದಾಯದ ಮುಖಂಡರಿಗೆ ಮನವಿ ಮಾಡುವಂತೆ ಪೊಲೀಸರಿಗೆ ಮುಖ್ಯಮಂತ್ರಿಗಳು ಸೂಚಿಸಿದರು ಎಂದು ತಿಳಿದುಬಂದಿದೆ.