ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಇನ್ನು ಮುಂದೆ 'ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ'
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಮರು ನಾಮಕರಣ ಮಾಡಲಾಗಿದ್ದು, ಈ ಕುರಿತು ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಎಂದು ಕರೆಯಲ್ಪಡುವ ಇಲಾಖೆಯನ್ನು ಇನ್ನು ಮುಂದೆ 'ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ"ಯನ್ನಾಗಿ ಮರು ನಾಮಕರಣ ಮಾಡಲಾಗಿದೆ.
ಈ ಕುರಿತಂತೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, 'ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ 12ನೇ ತರಗತಿಯವರೆಗಿನ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. “ರಾಷ್ಟ್ರೀಯ ಶಿಕ್ಷಣ ನೀತಿ-2020” ರಲ್ಲಿಯೂ ಸಹ ಈ ಅಂಶವನ್ನು ಪುನರುಚ್ಛರಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಇಲಾಖೆಯ (ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನೊಳಗೊಂಡಂತೆ; ಪದನಾಮವನ್ನು ಶಾಲಾ ಶಿಕ್ಷಣ ಇಲಾಖೆ ಎ೦ದು ಬದಲಾಯಿಸುವುದು ಸೂಕ್ತ ಎ೦ದು ವಿವಿಧ ಹಂತದ ಚರ್ಚೆಯಲ್ಲಿ ತಜ್ಜರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ ಈಗಾಗಲೇ ಕೇಂದ್ರ ಸರ್ಕಾರ ಹಾಗೂ ಹೆಚ್ಚಿನ ರಾಜ್ಯಗಳಲ್ಲಿ “ಶಾಲಾ ಶಿಕ್ಷಣ ಇಲಾಖೆ” ಎ೦ಬ ಪದನಾಮ ರೂಢಿಯಲ್ಲಿರುವುದರಿಂದ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಮಾದರಿಯನ್ನು ಅಳವಡಿಸಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.

