ಗಡುವಿಗೆ ಬದ್ಧತೆ ತೋರಿಸಿ, ಬಜೆಟ್ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತನ್ನಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
ಬಜೆಟ್ನಲ್ಲಿ ಘೋಷಿಸಲಾದ ಶೇ 80 ರಷ್ಟು ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರಿ ಆದೇಶಗಳನ್ನು ನೀಡಲಾಗಿದ್ದು, ಬಜೆಟ್ ಘೋಷಣೆಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಕ್ಕೆ ತಂದು, ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.
Published: 05th May 2022 08:09 AM | Last Updated: 05th May 2022 01:16 PM | A+A A-

ಸಿಎಂ ಬೊಮ್ಮಾಯಿ
ಬೆಂಗಳೂರು: ಬಜೆಟ್ನಲ್ಲಿ ಘೋಷಿಸಲಾದ ಶೇ 80 ರಷ್ಟು ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರಿ ಆದೇಶಗಳನ್ನು ನೀಡಲಾಗಿದ್ದು, ಬಜೆಟ್ ಘೋಷಣೆಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಕ್ಕೆ ತಂದು, ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.
ಪ್ರಸಕ್ತ ವರ್ಷದ ಬಜೆಟ್ ಘೋಷಣೆಗಳ ಅನುಷ್ಠಾನದ ಕುರಿತು ಜಲಸಂಪನ್ಮೂಲ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಅವರು ಬುಧವಾರ ಇಡೀ ದಿನ ಪರಿಶೀಲನಾ ಸಭೆಗಳನ್ನು ನಡೆಸಿದರು.
ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ನಲ್ಲಿ ಘೋಷಿಸಲಾದ ಶೇ 80 ರಷ್ಟು ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರಿ ಆದೇಶಗಳನ್ನುನೀಡಲಾಗಿದೆ. ತಾಂತ್ರಿಕ ಮತ್ತು ಕಾನೂನು ಸಮಸ್ಯೆಗಳನ್ನು ಎದುರಿಸುತ್ತಿರುವ ಕೆಲವು ಯೋಜನೆಗಳನ್ನು ಹೊರತುಪಡಿಸಿ ಬಹುತೇಕ ಯೋಜನೆಗಳಿಗೆ ಸರ್ಕಾರಿ ಆದೇಶಗಳನ್ನು ನೀಡಲಾಗಿದೆ ಎಂದು ಹೇಳಿದರು.
ಅಲ್ಲದೆ, ರಾಜ್ಯ ಮಟ್ಟದಲ್ಲಿ ಮಾತ್ರವಲ್ಲ, ಕೆಳಹಂತದವರೆಗೂ ನಿಗಾ ಇರಿಸಲಾಗುವುದು. ಫಲಾನುಭವಿಗಳ ಆಯ್ಕೆ ಹಾಗೂ ಸ್ಥಳೀಯವಾಗಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಂದಿನ ವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಇನ್ನು ಪರಿಶೀಲನಾ ಸಭೆಯಲ್ಲಿ ಬೊಮ್ಮಾಯಿ ಅವರು ಪ್ರತಿ ಕಾಮಗಾರಿಗೆ ಗಡುವು ವಿಧಿಸಿ ಅಧಿಕಾರಿಗಳಿಗೆ ಸೂಚಿಸಿದರು.
ಹುಬ್ಬಳ್ಳಿಯಲ್ಲಿ ಉದ್ದೇಶಿತ ಜಯದೇವ ಆಸ್ಪತ್ರೆಗೆ ಆಗಸ್ಟ್ 15 ರೊಳಗೆ ಶಂಕುಸ್ಥಾಪನೆ ಮಾಡಲು ಕ್ರಮಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಅಮಿತ್ ಶಾ ದೆಹಲಿಗೆ ಹೋದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಲಿದ್ದಾರೆ: ಸಿಎಂ ಬೊಮ್ಮಾಯಿ
ರಾಮನಗರ ಜಿಲ್ಲೆಯ ಅರ್ಚಕರಹಳ್ಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕ್ಯಾಂಪಸ್ ನಿರ್ಮಾಣ ಕಾಮಗಾರಿಗೆ ಜೂನ್ ಅಂತ್ಯದೊಳಗೆ ಚಾಲನೆ ನೀಡಬೇಕು ಎಂದು ನಿರ್ದೇಶನ ನೀಡಿದರು.
ಮೇ 10 ರೊಳಗೆ ಅಧಿಕಾರಿಗಳು ಎಲ್ಲಾ ಅನುಮೋದನೆಗಳನ್ನು ಪಡೆಯಬೇಕು. ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು ಕಾಮಗಾರಿಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಆರ್ಡಿಪಿಆರ್ ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಬೊಮ್ಮಾಯಿ ಅವರು, ಗ್ರಾಮ ಪಂಚಾಯಿತಿಗಳಲ್ಲಿ ದೇಸಿ ಕ್ರೀಡಾ ಪಂದ್ಯಾವಳಿಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಸಿಎಂ ಬೊಮ್ಮಾಯಿ ಅಧಿಕೃತ ನಿವಾಸದಲ್ಲಿ ಅಮಿತ್ ಶಾಗೆ ಭೋಜನ ಕೂಟ: ಸಂಭಾವ್ಯ ಸಚಿವರ ದಂಡೇ ಆಗಮನ
ಖಾಸಗಿ ಆಟಗಾರರ ನೆರವಿನಿಂದ ಖೋ-ಖೋ, ಕಬ್ಬಡಿ, ಎತ್ತಿನಗಾಡಿ ಓಟ ಸೇರಿದಂತೆ ಹಲವು ದೇಶಿ ಕ್ರೀಡೆಗಳನ್ನು ಆಯೋಜಿಸಬಹುದು ಎಂದು ಹೇಳಿದರು.
ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ನೆರವಿನಲ್ಲಿ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸುವ ಯೋಜನೆಗೆ ವೇಗ ನೀಡಬೇಕು ಎಂದು ಮುಖ್ಯಮಂತ್ರಿ ಗಡುವು ನೀಡಿದರು.