ಕುಣಿಗಲ್: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ, ಮೂವರು ಸ್ಥಳದಲ್ಲೇ ದುರ್ಮರಣ
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು, ಪಕ್ಕದ ರಸ್ತೆಗೆ ಹಾರಿ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿ, 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ -75 ರ ಬೇಗೂರು ಸಮೀಪ ಇಂದು ಮುಂಜಾನೆ ನಡೆದಿದೆ.
Published: 10th May 2022 04:29 PM | Last Updated: 10th May 2022 04:49 PM | A+A A-

ಅಪಘಾತದಿಂದ ನಜ್ಜುಗುಜ್ಜಾಗಿರುವ ಕಾರಿನ ಚಿತ್ರ
ಕುಣಿಗಲ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು, ಪಕ್ಕದ ರಸ್ತೆಗೆ ಹಾರಿ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿ, 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-75 ರ ಬೇಗೂರು ಸಮೀಪ ಇಂದು ಮುಂಜಾನೆ ನಡೆದಿದೆ.
ಮೃತರನ್ನು ಬೆಂಗಳೂರಿನ ಸಂಜಯ್ ನಗರದ ರಘು (38) ಹೆಬ್ಬಾಳ ಬಿ.ಎಲ್. ಸರ್ಕಲ್ ನಿವಾಸಿ ವಿಜಯ್ (36) ಹಾಗೂ ಸಂತೋಷ್ (28) ಎಂದು ಗುರುತಿಸಲಾಗಿದೆ. ಕಾರು ಚಾಲಕ ಲೋಕೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕೊಂಡೊಯ್ಯಲಾಗಿದೆ. ಹಾಗೆಯೇ ಟೆಂಪೋ ಟ್ರಾವಲ್ಸ್ ನಲ್ಲಿ ಪ್ರಯಾಣಿಸುತ್ತಿದ್ದ ವಸಂತ ಎಂಬವರು ಸೇರಿದಂತೆ 5 ಮಂದಿ ಗಾಯಗೊಂಡಿದ್ದು, ಅವರೆಲ್ಲರನ್ನೂ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಲ್ಕು ಮಂದಿ ಸ್ನೇಹಿತರು ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯ ಬೇಗೂರು ಸಮೀಪ ಈ ಅಪಘಾತ ಸಂಭವಿಸಿದೆ. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು ರಭಸದಿಂದ ಪಕ್ಕದ ರಸ್ತೆಗೆ ಹಾರಿ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿರುವುದಾಗಿ ತಿಳಿದುಬಂದಿದೆ.
ಮುಂಜಾನೆ ಸಂಭವಿಸಿದ ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆ ಸುದ್ದಿ ತಿಳಿದ ಕೂಡಲೇ ಕುಣಿಗಲ್ ಪೊಲೀಸರು ಸ್ಥಳಕ್ಕೆ ಧಾವಿಸಿ, ಕಾರಿನ ಒಳಗೆ ಹಾಗೂ ಹೊರಗೆ ಇದ್ದ ಶವಗಳನ್ನು ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.