ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಅಥವಾ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಪ್ರಸ್ತಾವಕ್ಕೆ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.
Published: 12th May 2022 06:49 PM | Last Updated: 12th May 2022 06:49 PM | A+A A-

ಸಚಿವ ಮಾಧುಸ್ವಾಮಿ
ಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಅಥವಾ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಪ್ರಸ್ತಾವಕ್ಕೆ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿ ಅವರು, "ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಸಂರಕ್ಷಣಾ ವಿಧೇಯಕವನ್ನು ನಾವು ವಿಧಾನಸಭೆಯಲ್ಲಿ ಅಂಗೀಕರಿಸಿದ್ದೇವೆ. ಕೆಲವು ಕಾರಣಗಳಿಂದ ಅದು ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಲಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಇಂದು ಸಚಿವ ಸಂಪುಟ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿ, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಬೊಮ್ಮಾಯಿ
ಮತಾಂತರ ನಿಷೇಧ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಮಂಡಿಸಿ ಅಂಗೀಕರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಕಳೆದ ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಈ ಮಸೂದೆಯನ್ನು ಸಿದ್ಧಪಡಿಸಲಾಗಿತ್ತು. ವಿಧಾನಸಭೆಯ ಒಪ್ಪಿಗೆ ಪಡೆದಿದ್ದ ಈ ಮಸೂದೆಯನ್ನು ವಿಧಾನ ಪರಿಷತ್ನಲ್ಲಿ ಮಂಡಿಸಿ ಅಂಗೀಕರಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ. ಈಗ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ.