ದಾವೋಸ್ ಶೃಂಗಸಭೆ ಮುಖ್ಯವಾಗಿದ್ದು, ಪಾಲ್ಗೊಳ್ಳುವಿಕೆ ಕುರಿತು ಶೀಘ್ರದಲ್ಲೇ ನಿರ್ಧಾರ : ಸಿಎಂ ಬೊಮ್ಮಾಯಿ
ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಗೆ ಭಾರತದಿಂದ ನಾನೂ ಸೇರಿದಂತೆ ಇಬ್ಬರು ಮುಖ್ಯಮಂತ್ರಿಗಳಿಗೆ ಮಾತ್ರ ಆಹ್ವಾನ ಬಂದಿದೆ. ಹೀಗಾಗಿ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದು ಮುಖ್ಯವಾಗಿದ್ದು, ಈ ಕುರಿತು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ.
Published: 14th May 2022 11:38 AM | Last Updated: 14th May 2022 12:03 PM | A+A A-

ಸಿಎಂ ಬೊಮ್ಮಾಯಿ
ಬೆಂಗಳೂರು: ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಗೆ ಭಾರತದಿಂದ ನಾನೂ ಸೇರಿದಂತೆ ಇಬ್ಬರು ಮುಖ್ಯಮಂತ್ರಿಗಳಿಗೆ ಮಾತ್ರ ಆಹ್ವಾನ ಬಂದಿದೆ. ಹೀಗಾಗಿ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದು ಮುಖ್ಯವಾಗಿದ್ದು, ಈ ಕುರಿತು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಗೆ ಭಾರತದಿಂದ ನಾನೂ ಸೇರಿದಂತೆ ಇಬ್ಬರು ಮುಖ್ಯಮಂತ್ರಿಗಳಿಗೆ ಮಾತ್ರ ಆಹ್ವಾನ ಬಂದಿದೆ. ಆದರೆ, ಇದೇ ಸಮಯದಲ್ಲಿ ಚುನಾವಣೆಗಳೂ ಎದುರಾಗಿವೆ. ಎಷ್ಟು ದಿನ ಶೃಂಗಸಭೆಯಲ್ಲಿ ಭಾಗವಹಿಸಬೇಕು ಎಂಬುದರ ಕುರಿತು ಶನಿವಾರವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯಸಭೆ ಚುನಾವಣೆ, ವಿಧಾನ ಪರಿಷತ್ ಚುನಾವಣೆ ಹಾಗೂ ಇತರ ರಾಜಕೀಯ ಪರಿಸ್ಥಿತಿ ಕುರಿತು ಶನಿವಾರ ಮಧ್ಯಾಹ್ನ ನಡೆಯುವ ಬಿಜೆಪಿ ರಾಜ್ಯ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದ ಗೌಡ ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿ ಭಾಗವಹಿಸುತ್ತಾರೆ. ಈ ವೇಳೆ ಚುನಾವಣೆಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.
ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಬಗ್ಗೆಯೂ ಚರ್ಚೆ ನಡೆಯಲಿದೆ. ಇತರ ರಾಜಕೀಯ ಬೆಳವಣಿಗೆಗಳ ಕುರಿತೂ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದರು.