ಡೆಂಘೀ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ 331 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಪ್ರಕರಣಗಳು ಹೆಚ್ಚಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಅಧಿಕಾರಿಗಳಿಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಸೂಚನೆ ನೀಡಿದರು.
Published: 16th May 2022 08:19 PM | Last Updated: 16th May 2022 08:19 PM | A+A A-

ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ 331 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಪ್ರಕರಣಗಳು ಹೆಚ್ಚಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಅಧಿಕಾರಿಗಳಿಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಸೂಚನೆ ನೀಡಿದರು.
ನಗರದಲ್ಲಿ ಡೆಂಗೀ ಪ್ರಕರಣಗಳನ್ನು ತಡೆಗಟ್ಟುವ ಸಂಬಂಧ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು ಮಳೆ ನೀರು ಎಲ್ಲೂ ನಿಲ್ಲದಂತೆ ನೋಡಿಕೊಳ್ಳಬೇಕು. ಈ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ಡೆಂಘೀ ಸಾಂಕ್ರಾಮಿಕ ರೋಗದ ಹರಡುವಿಕೆ ಹಾಗೂ ನಿಯಂತ್ರಣದ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸಲು ಜಾಥಾ ಕಾರ್ಯಕ್ರಮಗಳನ್ನು ಆಯೋಜಿಸಿ. ಜೊತೆಗೆ ಘನತ್ಯಾಜ್ಯ ವಿಭಾಗದ ಆಟೋ ಟಿಪ್ಪರ್ ಗಳಲ್ಲಿ ಧ್ವನಿವರ್ಧಕಗಳ ಮೂಲಕ ಡೆಂಘೀ ನಿಯಂತ್ರಿಸುವ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ, ಅಪಘಾತದಲ್ಲಿ ಡೆಲಿವರಿ ಬಾಯ್ ಸಾವು
ಪಾಲಿಕೆಯ ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಎ.ಎನ್.ಎಂ ಹಾಗೂ ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ಸೊಳ್ಳೆ ಉತ್ಪತ್ತಿ ಆಗುವ ತಾಣಗಳ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ಲಾರ್ವಾ ಉತ್ಪತ್ತಿಯಾಗುವ ತಾಣಗಳನ್ನು ಗುರುತಿಸುವ ಕೆಲಸ ಮಾಡುತ್ತಾರೆ. ಆ ಬಳಿಕ ಸೊಳ್ಳೆ ಉತ್ಪತ್ತಿ ತಾಣಗಳನ್ನು ಗ್ಯಾಂಗ್ ಮ್ಯಾನ್ ಗಳು ಸ್ಥಳಕ್ಕೆ ಭೇಟಿ ನೀಡಿ ನಾಶಪಡಿಸುತ್ತಾರೆಂದು ಮುಖ್ಯ ಆರೋಗ್ಯಾಧಿಕಾರಿ ಆಯುಕ್ತರಿಗೆ ಮಾಹಿತಿ ನೀಡಿದರು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಬೇಕಾದ ಎಲ್ಲಾ ಔಷಧಗಳು ಹಾಗೂ ಅದರಿಂದ ಬರುವ ಖಾಯಿಲೆಗೆ ಚಿಕಿತ್ಸೆ ನೀಡಲು ಬೇಕಾಗುವ ಅಗತ್ಯ ಔಷಧಗಳು ಲಭ್ಯವಿರಬೇಕು. ರಸ್ತೆ ಬದಿ ಮಾರಾಟ ಮಾಡುವ ಎಳನೀರು ಅಂಗಡಿಯವರಿಗೆ ತೆಂಗಿನ ಚಿಪ್ಪುಗಳನ್ನು ಕೂಡಲೆ ತೆರವು ಮಾಡಲು ಸೂಚನೆ ನೀಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಬೆಂಗಳೂರು: ತಿಂಗಳೊಳಗೆ ವಾಜಪೇಯಿ ಕ್ರೀಡಾಂಗಣ ದುರಸ್ತಿ- ಬಿಬಿಎಂಪಿ ಮುಖ್ಯ ಆಯುಕ್ತ
ಜಲಮಂಡಳಿ ಇಲಾಖೆಯು ಕುಡಿಯುವ ನೀರು ಸಂಗ್ರಹಿಸುವ ಸ್ಥಳದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕುಡಿಯುವ ನೀರು ಹರಿಯುವ ಪೈಪ್ ಗಳಲ್ಲಿ ನೀರು ಸರಾಹವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರು ಸಂಪರ್ಕಕ್ಕಾಗಿ ರಸ್ತೆ ಬದಿಯಲ್ಲಿ ಇರಿಸಿರುವ ಪೈಪ್ ಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಎಲ್ಲೆಲ್ಲಿ ನೀರು ನಿಂತಿದೆ ಎಂಬುದನ್ನು ಪರಿಶೀಲಿಸಿ ಅದನ್ನು ಸ್ವಚ್ಛ ಮಾಡಬೇಕೆಂದು ಮುಖ್ಯ ಆಯುಕ್ತರು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.