ಎನ್ ಪಿಎಸ್ ರದ್ದುಪಡಿಸಿ ರಾಜ್ಯ ಸರ್ಕಾರ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು: ಸರ್ಕಾರಿ ನೌಕರರ ಆಗ್ರಹ
ಬೆಳಗಾವಿ: ಹೊಸ ಪಿಂಚಣಿ ಯೋಜನೆ (NPS) ರದ್ದುಪಡಿಸಿ ಮತ್ತು ಹಳೆಯ ಪಿಂಚಣಿ ಯೋಜನೆ (OPS) ಮರು ಜಾರಿಗೆ ಒತ್ತಾಯಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ನಡೆಸುತ್ತಿರುವ ‘ಒಪಿಎಸ್ ಸಂಕಲ್ಪ ಯಾತ್ರೆ’ ನಿನ್ನೆ ಭಾನುವಾರ ಬೆಳಗಾವಿ ಜಿಲ್ಲೆಯನ್ನು ಪ್ರವೇಶಿಸಿದೆ.
ಎನ್‌ಪಿಎಸ್ ಅನುಷ್ಠಾನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್, ರಾಜ್ಯದಲ್ಲಿ ಏಪ್ರಿಲ್ 1, 2006 ರ ನಂತರ ಸೇವೆಗೆ ಸೇರಿದ ನೌಕರರಿಗೆ ಎನ್‌ಪಿಎಸ್ ಜಾರಿಗೊಳಿಸಲಾಗಿದೆ. ಅದರ ಪ್ರಕಾರ ಸೇವೆಯಿಂದ ನಿವೃತ್ತರಾಗುವವರಿಗೆ ಅತ್ಯಂತ ಕಡಿಮೆ ಪಿಂಚಣಿ ಸಿಗಲಿದೆ. ಪಿಂಚಣಿ ವಿಚಾರದಲ್ಲಿ ಸರ್ಕಾರದ ನಿಲುವು ಸಂವಿಧಾನಕ್ಕೆ ವಿರುದ್ಧವಾಗಿದೆ. ಸರ್ಕಾರದ ಕ್ರಮವನ್ನು ವಿರೋಧಿಸಿ ಬೆಳಗಾವಿಯಲ್ಲಿ 27ನೇ ಜಿಲ್ಲಾ ಸಮಾವೇಶ ನಡೆಸಿದ್ದೇವೆ. ಆದರೆ, ಸರ್ಕಾರದಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದಿದ್ದಾರೆ.
ಬೆಳಗಾವಿಯ ಕೋಟೆ ಕೆರೆ ಬಳಿಯ ಅಶೋಕ ವೃತ್ತದಿಂದ ಆರಂಭವಾದ ರ್ಯಾಲಿಯಲ್ಲಿ ಸಾವಿರಾರು ರಾಜ್ಯ ಸರ್ಕಾರಿ ನೌಕರರು ಪಾಲ್ಗೊಂಡು ಸಂಗೊಳ್ಳಿ ರಾಯಣ್ಣ ವೃತ್ತ, ರಾಣಿ ಚೆನ್ನಮ್ಮ ವೃತ್ತದ ಮೂಲಕ ನ್ಯಾಯಾಲಯದ ಆವರಣದಲ್ಲಿ ಸಮಾಪನಗೊಂಡರು. ನೌಕರರು ತಮ್ಮ ಬೇಡಿಕೆ ಈಡೇರಿಕೆಗಾಗಿ ಮುಂದಿನ ಹೋರಾಟದ ಕುರಿತು ಚರ್ಚಿಸಿದರು.
ಕೇಂದ್ರವು ಎನ್‌ಪಿಎಸ್ ನ್ನು ಪರಿಚಯಿಸಿದೆ. ಅದನ್ನು ಬದಲಾಯಿಸುವುದು ಅಸಾಧ್ಯ ಎಂದು ರಾಜ್ಯ ಸರ್ಕಾರ ಹೇಳುತ್ತಿತ್ತು. ಆದರೆ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಜಾರ್ಖಂಡ್ ಸರ್ಕಾರಗಳು ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸಿವೆ. ಕರ್ನಾಟಕ ಸರ್ಕಾರ ಕೂಡ ಇದೇ ಮಾರ್ಗದಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ