ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆ: ರಾಜ್ಯಕ್ಕೆ 2ನೇ ಸ್ಥಾನ

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ರಾಜ್ಯಾದ್ಯಂತ 540 ಹೊಸ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಶನಿವಾರ ಹೇಳಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ರಾಜ್ಯಾದ್ಯಂತ 540 ಹೊಸ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರು, ಹಿಂದುಳಿದ ಮತ್ತು ಮಧ್ಯಮವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಮತ್ತು ಶಸ್ತ್ರಚಿಕಿತ್ಸೆಯ ಪರಿಕರಗಳನ್ನು ಒದಗಿಸುವಲ್ಲಿ ಪ್ರಧಾನಮಂತ್ರಿ ಜನೌಷಧಿ ಕಾರ್ಯಕ್ರಮ ಅತ್ಯುತ್ತಮವಾಗಿದೆ. ರಾಜ್ಯದಲ್ಲಿ ಉತ್ತಮವಾಗಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಈವರೆಗೆ 1,052 ಮಳಿಗೆಗಳನ್ನು ತೆರೆಯಲಾಗಿದೆ. ಇಡೀ ದೇಶದಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇರಳ ಮೂರನೇ ಸ್ಥಾನದಲ್ಲಿದೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರು ಆರೋಗ್ಯಕ್ಕಾಗಿ ಮಾಡುತ್ತಿರುವ ವೆಚ್ಚ ಜನೌಷಧಿ ಮಳಿಗೆಗಳಿಂದ ಗಣನೀಯವಾಗಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಹೊಸದಾಗಿ ಮತ್ತೆ 500 ಮಳಿಗೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 40 ಹೊಸ ಮಳಿಗೆಗಳಿಗೆ ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆಯಲು ಸರ್ಕಾರ ಕಾರ್ಯೋನ್ಮುಖವಾಗಿದೆ. ಈ ವರ್ಷದ ಫೆಬ್ರವರಿ ನಂತರ ಸುಮಾರು 300 ಮಳಿಗೆಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಜನೌಷಧಿಗಳು ಬ್ರಾಂಡೆಡ್‌ ಆಗಿದ್ದು, ಮಾರುಕಟ್ಟೆಗಿಂತ ಶೇ.50 ರಿಂದ 80 ರಷ್ಟು ಅಗ್ಗದ ದರದಲ್ಲಿ ದೊರೆಯುತ್ತಿವೆ. ಒಟ್ಟು 1451 ಔಷಧಗಳು ಮತ್ತು 240 ಶಸ್ತ್ರಚಿಕಿತ್ಸೆ ಪರಿಕರಗಳು, ದುಬಾರಿ ವೆಚ್ಚದ ಕ್ಯಾನ್ಸರ್‌ ಔಷಧಗಳು ಸಹ ಇಲ್ಲಿ ದೊರೆಯುತ್ತಿವೆ. ಹೀಗಾಗಿ, ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದಿಂದಲೂ ಜನೌಷಧಿ ಮಳಿಗೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆರೆಯಲು ಒತ್ತಡವಿದೆ. ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಎಂಬ ಗ್ರಾಮದಲ್ಲೂ ಜನೌಷಧಿ ಮಳಿಗೆ ತೆರೆದಿರುವುದು ವಿಶೇಷವಾಗಿದ್ದು, ಬೇಡಿಕೆಗೆ ಅನುಗುಣವಾಗಿ ಹೊಸ ಮಳಿಗೆಗಳಿಗೆ ಮಂಜೂರಾತಿ ನೀಡಲಾಗುತ್ತಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com