ಶ್ರೀಗಂಧ ನೀತಿಗೆ ಸಚಿವ ಸಂಪುಟ ಅಸ್ತು, 43 ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಅನುಮೋದನೆ

ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ಕರ್ನಾಟಕ ರಾಜ್ಯ ಶ್ರೀಗಂಧ ನೀತಿ-2022ಕ್ಕೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ಕರ್ನಾಟಕ ರಾಜ್ಯ ಶ್ರೀಗಂಧ ನೀತಿ-2022ಕ್ಕೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವ ಸುಧಾಕರ್ ಅವರು, ಶ್ರೀಗಂಧ ನೀತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರಿಂದ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧವನ್ನು ಬೆಳೆಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಸಿಗಲಿದೆ ಎಂದರು.

ದೇಶ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶ್ರೀಗಂಧಕ್ಕೆ ವ್ಯಾಪಕ ಬೇಡಿಕೆ ಇದೆ. ಗಂಧವನ್ನು ಬೆಳೆಸುವ ರೈತರಿಗೆ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡುವುದರ ಜತೆಗೆ, ಗಂಧದ ಮರಕ್ಕೆ ಚಿಪ್‌ ಅಳವಡಿಸಿ ಕಳ್ಳತನ ಆಗುವುದನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಕ್ರಮದಿಂದಾಗಿ ರೈತರ ಆದಾಯವೂ ಹೆಚ್ಚಾಗಲಿದೆ ಎಂದರು.

ರಾಜ್ಯದಲ್ಲಿ ಮೈಸೂರ್ ಸೋಪ್ಸ್‌ಗೆ ಗಂಧದ ಮರಗಳು ಕೊರತೆ ಆಗಿರುವ ಕಾರಣ ಆಸ್ಟ್ರೇಲಿಯಾದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ರೈತರು ಬೆಳೆದ ಗಂಧ ಈ ಕಾರ್ಖಾನೆಗೆ ಪೂರೈಕೆ ಮಾಡುವುದರ ಜತೆಗೆ ಖಾಸಗಿ ಸಂಸ್ಥೆಗಳಿಗೂ ಪೂರೈಕೆ ಮಾಡಬಹುದಾಗಿದೆ. ಹಿಂದೆ ಮುಕ್ತವಾಗಿ ಮಾರಾಟ ಮಾಡುವುದಕ್ಕೆ ನಿರ್ಬಂಧವಿತ್ತು ಎಂದು ಸುಧಾಕರ್‌ ಹೇಳಿದರು.

ರಾಜ್ಯದಲ್ಲಿ ಹೊಸದಾಗಿ ಉತ್ತಾರೆಗುಡ್ಡ ವನ್ಯಜೀವಿಧಾಮ, ಬಂಕಾಪುರ ವನ್ಯಜೀವಿಧಾಮ ಮತ್ತು ಅರಸೀಕೆರೆ ಕರಡಿ ಲಗತ್ತಿ ಧಾಮಗಳನ್ನು ಹಾಗೂ ಹಿರೆಸೂಲೇಕೆರೆ ಕರಡಿ ಸಂರಕ್ಷಣಾ ಮೀಸಲು ಪ್ರದೇಶ, ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ, ಮುಂಡಿಗೆ ಕೆರೆ ಮತ್ತು ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ ಮತ್ತು ಬೋನಾಳ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶಗಳನ್ನು ಘೋಷಿಸುವ ಪ್ರಸ್ತಾವನೆಗಳಿಗೆ ಸಂಪುಟ ಅನುಮೋದನೆ ನೀಡಿದೆ.

ತುಮಕೂರಿನಲ್ಲಿ 100 ಹಾಸಿಗೆಗಳ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣ ಮತ್ತು ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನರ್ಸಿಂಗ್ ಕಾಲೇಜು ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ ನೀಡಿದೆ.

ರಾಜ್ಯದ 43 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 397 ಕೋಟಿ ರೂಪಾಯಿ ವೆಚ್ಚದಲ್ಲಿ ಮಾದರಿ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ 35 ಕೋಟಿ ರೂಪಾಯಿ ವೆಚ್ಚದಲ್ಲಿ ಟ್ರಾಮಾ ಕೇರ್​​ ಸೆಂಟರ್​ ನಿರ್ಮಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಿ ಮತ್ತು ಡಿ ಗ್ರೂಪ್ ನೌಕರರ ವರ್ಗಾವಣೆ ನೀತಿಯಲ್ಲಿ ಬದಲಾವಣೆ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮೂಲಕ ಪತಿ, ಪತ್ನಿ ವರ್ಗಾವಣೆ ಆಗಲು ಇದ್ದ ತೊಡಕು ನಿವಾರಣೆಯಾಗಿದೆ. ಪೊಲೀಸ್ ಇಲಾಖೆಯಲ್ಲಿ 7 ವರ್ಷ ಸೇವೆ ಪೂರ್ಣಗೊಳಿಸಿದ್ದರೆ ಅಂತರ ಜಿಲ್ಲಾ  ವರ್ಗಾವಣೆ ಕೊಡಬಹುದು. ಇದರಲ್ಲಿ ಇನ್ನೂ ಸಡಿಲಿಕೆ ಮಾಡಿಕೊಳ್ಳಲು ಆಯಾ ಇಲಾಖೆಗೆ ಬಿಡಲಾಗಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com