ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನ: ರೈಲ್ವೆ- ರಾಜ್ಯ ಸರ್ಕಾರದ ಅಧಿಕಾರಿಗಳ ತಂಡ ರಚನೆಗೆ ತೀರ್ಮಾನ

ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಿರುವ ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನಕ್ಕಾಗಿ ರೈಲ್ವೆ ಇಲಾಖೆ ಹಾಗೂ ಕರ್ನಾಟಕ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತೀರ್ಮಾನಿಸಿದ್ದಾರೆ.
ರೈಲ್ವೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಸಿಎಂ ಬೊಮ್ಮಾಯಿ ಮತ್ತಿತರರು
ರೈಲ್ವೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಸಿಎಂ ಬೊಮ್ಮಾಯಿ ಮತ್ತಿತರರು

ಬೆಂಗಳೂರು: ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತಿರುವ ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನಕ್ಕಾಗಿ ರೈಲ್ವೆ ಇಲಾಖೆ ಹಾಗೂ ಕರ್ನಾಟಕ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತೀರ್ಮಾನಿಸಿದ್ದಾರೆ.

 ರಾಜ್ಯದಲ್ಲಿ ಕೇಂದ್ರ ಸರ್ಕಾರದೊಂದಿಗೆ 50:50 ವೆಚ್ಚ ಹಂಚಿಕೆ ಆಧಾರದಲ್ಲಿ 9 ಹೊಸ ರೈಲು ಮಾರ್ಗ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಈ ಯೋಜನೆಗಳ ಪ್ರಗತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಯೋಜನೆಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಉತ್ತಮ ಸಮನ್ವಯ ಸಾಧಿಸುವ ಹಾಗೂ ತೊಡಕುಗಳನ್ನು ತ್ವರಿತವಾಗಿ ನಿವಾರಿಸುವ ಉದ್ದೇಶದಿಂದ ಅಧಿಕಾರಿಗಳ ತಂಡ ರಚಿಸುವುದಾಗಿ ಅವರು ತಿಳಿಸಿದರು.

ಭೂಸ್ವಾಧೀನಕ್ಕೆ ಆದ್ಯತೆ:  ರೈಲ್ವೆ ಯೋಜನೆಗಳಿಗೆ ಅಗತ್ಯವಿರುವ ಭೂಸ್ವಾಧೀನಕ್ಕೆ ಮೊದಲ ಆದ್ಯತೆ ನೀಡುವಂತೆ, ಅತಿ ಹೆಚ್ಚು ಬೇಡಿಕೆಯ ಹಾಗೂ ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯವಿರುವ ಯೋಜನೆಗಳಿಗೆ ಆದ್ಯತೆಯ ಮೇರೆಗೆ ಭೂಸ್ವಾಧೀನ ಮಾಡುವಂತೆ ಸೂಚಿಸಿದರು.  9 ರೈಲ್ವೆ ಯೋಜನೆಗಳಿಗೆ ಒಟ್ಟು 15 ಸಾವಿರ ಎಕರೆ ಭೂಮಿಯ ಅಗತ್ಯವಿದ್ದು, ಈ ವರೆಗೆ  9000 ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. 6000 ಎಕರೆ ಭೂಸ್ವಾಧೀನ ಮಾಡಿಕೊಡಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ರೈಲ್ವೆ ಇಲಾಖೆ ಹಾಗೂ ರಾಜ್ಯ ಸರ್ಕಾರಗಳು ರೈಲ್ವೆ ಯೋಜನೆಗಳಿಗೆ ಪರಸ್ಪರ ಪೂರಕವಾಗಿ ಅನುದಾನ ಬಿಡುಗಡೆ ಮಾಡಬೇಕು. ಸಕಾಲದಲ್ಲಿ ಅನುದಾನ ಬಿಡುಗಡೆ ಮಾಡುವುದರಿಂದ ನಿಗದಿತ ಕಾಲಾವಧಿಯಲ್ಲಿ ಯೋಜನೆ ಪೂರ್ಣಗೊಳಿಸಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಮಾತನಾಡಿ, ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನ ನಮ್ಮ ಆದ್ಯತೆಯಾಗಿದೆ. ಇದಕ್ಕಾಗಿ ಹೆಚ್ಚಿನ ಸಮನ್ವಯದೊಂದಿಗೆ ರಾಜ್ಯ ಸರ್ಕಾರ ಹಾಗೂ ರೈಲ್ವೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು. ಭೂಸ್ವಾಧೀನ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಆದ್ಯತೆ ನೀಡಿರುವ ಕುರಿತು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಗದಗ –ವಾಡಿ, ರಾಯದುರ್ಗ- ತುಮಕೂರು, ಗಿಣಿಗೇರಾ- ರಾಯಚೂರು, ತುಮಕೂರು-ಚಿತ್ರದುರ್ಗ-ದಾವಣಗೆರೆ, ಬಾಗಲಕೋಟೆ- ಕುಡಚಿ, ಕಡೂರು-ಚಿಕ್ಕಮಗಳೂರು-ಬೇಲೂರು, ಹಾಸನ – ಬೇಲೂರು, ಶಿವಮೊಗ್ಗ ರಾಣೆಬೆನ್ನೂರು, ಮಾರಿಕುಪ್ಪಂ-ಕುಪ್ಪಂ, ಬೆಳಗಾವಿ-ಧಾರವಾಡ ಮೊದಲಾದ ಹೊಸ ರೈಲು ಮಾರ್ಗಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಲಾಯಿತು. ಇದರೊಂದಿಗೆ ಬೆಂಗಳೂರು ಸಬ್ ಅರ್ಬನ್ ರೈಲು ಮಾರ್ಗ, ರೈಲು ಮಾರ್ಗಗಳ ವಿದ್ಯುದೀಕರಣ ಮೊದಲಾದ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಮಾರ್ಚ್ 2023ರಲ್ಲಿ ಹುಬ್ಬಳ್ಳಿ-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡುವ ಗುರಿಯಿದ್ದು, ಇದಕ್ಕೆ ಪೂರಕವಾಗಿ ರೈಲು ಮಾರ್ಗ ವಿದ್ಯುದೀಕರಣ ಪ್ರಕ್ರಿಯೆ ಪೂರ್ಣಗೊಳಿಸಲು ಕ್ರಮಗಳನ್ನು ಕೈಗೊಳ್ಳಲು ಕೆಪಿಟಿಸಿಎಲ್ ಗೆ ಸೂಚಿಸಲಾಯಿತು.

ಸಭೆಯಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಷಿ, ಸಂಸದ ಎಸ್. ಮುನಿಸ್ವಾಮಿ ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಮತ್ತು ಇತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com