ಬೆಂಗಳೂರು: ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬೆಳಗಾವಿ ಗಡಿ ವಿವಾದದ ಬಗ್ಗೆ ನವಂಬರ್ 23ರಂದು ಸುಪ್ರೀಂ ಕೋರ್ಟ್ ನಡೆಸಲಿರುವ ವಿಚಾರಣೆಯನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಭರದಿಂದ ಸಿದ್ಧತೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿರುವುದು ಆ ರಾಜ್ಯ ಗಡಿವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.
ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಬಿಜೆಪಿ ಸರ್ಕಾರ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸುತ್ತದೆ. ಕಾಲವ್ಯಯ ಮಾಡದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರೋಧ ಪಕ್ಷಗಳ ಸಭೆ ಕರೆದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸಮಾಡಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
Advertisement