
ವಿಜಯಪುರ: ವಿಜಯಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕೆಎಸ್ಆರ್ ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಈ ಘಟನೆ ನಡೆದಿದ್ದು, ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಹುನಗುಂದ ತಾಲೂಕಿನ ಧನ್ನೂರು ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ ಹಾಜಿಸಾಬ್ ಬಾಗವಾನ್(50), ಪರಶುರಾಮ ಕಟ್ಟಿ(45) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮತ್ತೋರ್ವ ಸವಾರ ರಾಜು ಚವ್ಹಾಣ್ (45) ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿಯಾ ಕಾರ್ವೊಂದು ಮುದ್ದೇಬಿಹಾಳದಿಂದ ಇಳಕಲ್ ಕಡೆ ಬರುತ್ತಿತ್ತು. ಈ ವೇಳೆ ಕಾರು ಮೊದಲು ಫೋರ್ಡ್ ಎಂಡವರ್ ಕಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಇಳಕಲ್ನಿಂದ ಮುದ್ದೇಬಿಹಾಳ ಕಡೆ ಹೊರಟಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಮತ್ತು ಬಸ್ ಮುಂಭಾಗ ನಜ್ಜುಗುಜ್ಜಾಗಿದೆ.
ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
Advertisement