ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ: ಬಿ.ಎಸ್ ಯಡಿಯೂರಪ್ಪ ನಿಯೋಗದಿಂದ ಕೇಂದ್ರ ಕೃಷಿ ಸಚಿವರ ಭೇಟಿ
ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೃಷ್ಣ ಭಟ್ ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಿದರು.
Published: 20th October 2022 09:31 AM | Last Updated: 20th October 2022 02:14 PM | A+A A-

ಬಿಎಸ್ ವೈ ನಿಯೋಗದಿಂದ ಕೇಂದ್ರ ಸಚಿವರ ಭೇಟಿ
ಶಿವಮೊಗ್ಗ: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ತಗುಲಿದ್ದು, ರೈತರು ಕಂಗಾಲಾಗಿ ಹೋಗಿದ್ದಾರೆ. ಆದ್ದರಿಂದ ಎಲೆ ಚುಕ್ಕಿ ರೋಗ ನಿಯಂತ್ರಣದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ರಾಜ್ಯದ ನಾಯಕರು ಮುಂದಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೃಷ್ಣ ಭಟ್ ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಿದರು.
ಕೇಂದ್ರ ಸಚಿವರೊಂದಿಗೆ ಚರ್ಚಿಸಿದ ಯಡಿಯೂರಪ್ಪ, ದೇಶದಲ್ಲೇ ಅತಿ ಹೆಚ್ಚು ಪ್ರಮಾಣದಲ್ಲಿ ಅಡಿಕೆ ಉತ್ಪಾದನೆ ಮಾಡುವ ರಾಜ್ಯವಾಗಿದ್ದು, ದೇಶದ ಒಟ್ಟು ಉತ್ಪಾದನೆಯ ಶೇ.80 ರಷ್ಟು ಅಡಿಕೆಯನ್ನು ಕರ್ನಾಟಕದಲ್ಲಿ ಉತ್ಪಾದಿಸಲಾಗುತ್ತದೆ. ಕರ್ನಾಟಕದಲ್ಲಿ 5.02 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆಯಲಾಗುತ್ತಿದ್ದು, 50 ಲಕ್ಷ ಮಂದಿಯಷ್ಟುಜನ ಇದನ್ನು ಅವಲಂಬಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 1.02 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿದ್ದು ಶೇ.60 ರಷ್ಟುಆರ್ಥಿಕತೆ ಅಡಿಕೆ ಅವಲಂಬಿಸಿದೆ. ಇತ್ತೀಚೆಗೆ ಸುರಿದ ತೀವ್ರ ಮಳೆಯಿಂದಾಗಿ ಎಲೆ ಚುಕ್ಕೆ ರೋಗ ಉಂಟಾಗಿ ತೀವ್ರ ಬೆಳೆ ಹಾನಿಯಾಗಿದೆ. ಈ ಬಗ್ಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಮನವಿ ಸಲ್ಲಿಸಿದರು.
ನಿರಂತರ ಮಳೆಯಿಂದಾಗಿ ಮಣ್ಣಿನ ಪೋಷಕಾಂಶಗಳನ್ನು ಕೊಚ್ಚಿಕೊಂಡು ಹೋಗಿದೆ. ಹೀಗಾಗಿ ರೋಗದ ತೀವ್ರತೆ ಹೆಚ್ಚಿದೆ. ಹಲವು ಜಿಲ್ಲೆಗಳಲ್ಲಿ ರೈತರು ಮತ್ತು ಅಡಿಕೆ ಬೆಳೆಗಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಇತ್ತೀಚೆಗೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.