ರೋಗಗ್ರಸ್ಥ ಕೈಗಾರಿಕಾ ಘಟಕಗಳ ಪುನಶ್ಚೇತನಕ್ಕೆ ಕ್ರಮ: ಸಚಿವ ಎಂಟಿಬಿ ನಾಗರಾಜ್
ಕೋವಿಡ್ ಸಾಂಕ್ರಮಿಕದಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಬಹಳಷ್ಟು ಘಟಕಗಳು ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಮುಚ್ಚಲ್ಪಟ್ಟಿರುವ ಅಂಶವು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ಸಚಿವ ಎಂ.ಟಿ.ಬಿ. ನಾಗರಾಜ್ ಹೇಳಿದ್ದಾರೆ.
Published: 23rd October 2022 03:46 PM | Last Updated: 23rd October 2022 03:46 PM | A+A A-

ಕಾರ್ಯಕ್ರಮದಲ್ಲಿ ಎಂಟಿಬಿ ನಾಗರಾಜ್
ಬೆಂಗಳೂರು: ಕೋವಿಡ್ ಸಾಂಕ್ರಮಿಕದಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಬಹಳಷ್ಟು ಘಟಕಗಳು ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಮುಚ್ಚಲ್ಪಟ್ಟಿರುವ ಅಂಶವು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ಸಚಿವ ಎಂ.ಟಿ.ಬಿ. ನಾಗರಾಜ್ ಹೇಳಿದ್ದಾರೆ.
ಕಾಸಿಯಾ ಮತ್ತು ಎಂ.ಎಸ್.ಎಂ.ಇ. ಅಭಿವೃದ್ಧಿ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ವಿ.ಡಿ.ಪಿ. ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಚ್ಚಲ್ಪಟ್ಟಿರುವ ಘಟಕಗಳು ಯಾವ ಕಾರಣಗಳಿಂದಾಗಿ ಮುಚ್ಚಲ್ಪಟ್ಟಿವೆ ಇತ್ಯಾದಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಸಣ್ಣ ಕೈಗಾರಿಕೆಗಳ ಸ್ಥಾಪನೆಗಾಗಿ ತಾಲ್ಲೂಕು ಮಟ್ಟದಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಲಾಗುವುದು, ಕಾಸಿಯಾ ಸೆಂಟರ್ ಆಫ್ ಎಕ್ಸಲೆನ್ಸ್ ಅಂಡ್ ಇನೊವೇಶನ್ ಯೋಜನೆಗೆ ಬರಬೇಕಾದ ರೂ. 2.65 ಕೋಟಿ ಬಾಕಿ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವ ಕುರಿತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನೆಲಮಂಗಲ ಕೈಗಾರಿಕಾ ವಸಾಹತುವಿಗೆ ಸಂಬಂಧಿಸಿದ ಸಮಸ್ಯೆಗಳು, ಕೈಗಾರಿಕಾ ಘಟಕಗಳಿಗೆ ವಿಧಿಸುತ್ತಿರುವ ಆಸ್ತಿ ತೆರಿಗೆ ಹಾಗೂ ಇತರೆ ಸಮಸ್ಯೆಗಳ ಕುರಿತು ಕಾಸಿಯಾ ಸಲ್ಲಿಸಿದ್ದ ಬೇಡಿಕೆ ಕುರಿತಂತೆ ಅಧಿಕಾರಿಗಳ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಕ್ರಮ ಕೈಗೊಳ್ಳುವುದಾಗಿ ಸಚಿವರು ಆಶ್ವಾಸನೆ ನೀಡಿದರು.