ನವೆಂಬರ್ 15ರೊಳಗೆ ರಸ್ತೆ ಗುಂಡಿ ಮುಚ್ಚಿ: ಅಧಿಕಾರಿಗಳಿಗೆ ಬಿಬಿಎಂಪಿ ಗಡುವು

ನವೆಂಬರ್ 15 ರೊಳಗೆ ನಗರದಲ್ಲಿನ ಗುಂಡಿಗಳನ್ನು ಮುಚ್ಚದಿದ್ದರೆ ಅಮಾನತು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು  ನಿರ್ಮಾಣಗೊಂಡಿರುವ ಬೃಹತ್ ಗುಂಡಿ
ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ನಿರ್ಮಾಣಗೊಂಡಿರುವ ಬೃಹತ್ ಗುಂಡಿ

ಬೆಂಗಳೂರು: ನವೆಂಬರ್ 15 ರೊಳಗೆ ನಗರದಲ್ಲಿನ ಗುಂಡಿಗಳನ್ನು ಮುಚ್ಚದಿದ್ದರೆ ಅಮಾನತು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. 

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಿರಿನಾಥ್ ಅವರು, ಅಧಿಕಾರಿಗಳಿಗೆ ಎರಡು ಬಾರಿ ನೋಟಿಸ್ ನೀಡಲಾಗುವುದು. ಮೊದಲನೆಯ ನೋಟಿಸ್ ನಲ್ಲಿ ಎಚ್ಚರಿಕೆ ನೀಡುವುದು. ಎರಡನೆಯ ನೋಟಿಸ್ ನಲ್ಲಿ ಅಮಾನತು ಸೇರಿದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಈ ಸಂಬಂಧ ಸಹಾಯಕ ಎಂಜಿನಿಯರ್‌ಗಳು, ಕಾರ್ಯಪಾಲಕ ಎಂಜಿನಿಯರ್‌ಗಳು ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು, ಮುಖ್ಯ ಎಂಜಿನಿಯರ್‌ಗಳಿಗೆ ಈಗಾಗಲೇ ಕೆಲವು ನೋಟಿಸ್‌ಗಳನ್ನು ನೀಡಲಾಗಿದೆ. ಅಧಿಕಾರಿಗಳು ಗಡುವಿನೊಳಗೆ ಗುಂಡಿಗಳನ್ನು ತುಂಬಲಾಗುವುದು ಎಂದು ಭರವಸೆ ನೀಡಿದ್ದಾರೆಂದು ತಿಳಿಸಿದರು.

ರಸ್ತೆ ಕುರಿತು ಬಿಬಿಎಂಪಿ ಹಾಗೂ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಕೋರಮಂಗಲ ನಿವಾಸಿ ವಿಜಯನ್ ಮೆನನ್ ಮತ್ತು ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್)ನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ರಸ್ತೆಗುಂಡಿಗಳಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಪರಿಸ್ಥಿತಿ ಹೀಗಿದ್ದರೂ ಪಾಲಿಕೆ ರಸ್ತೆ ಗುಂಡಿ ಮುಚ್ಚಲು ಯಾವುದೇ ತಂತ್ರಜ್ಞಾನ ಬಳಕೆ ಮಾಡುತ್ತಿಲ್ಲ ಎಂದು ಹೇಳಿದರು. 

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಗುಂಡಿಗಳನ್ನು ಸರಿಪಡಿಸುವ ಪ್ರಕ್ರಿಯೆಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ. ಈ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com