ಕರಾವಳಿ-ಮಲೆನಾಡಿಗೆ ಇನ್ನೆರಡು ದಿನ ಯಲ್ಲೋ ಅಲರ್ಟ್ ಘೋಷಣೆ: ಮಳೆಹಾನಿ ಬಗ್ಗೆ ವಿಧಾನಸಭೆಯಲ್ಲಿ ವಿಸ್ತ್ರತ ಚರ್ಚೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಡೆ ಮುಂದಿನ ದಿನಗಳಲ್ಲಿ ಮಳೆ ಪ್ರಮಾಣ ಸಾಕಷ್ಟು ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಡೆ ಮುಂದಿನ ದಿನಗಳಲ್ಲಿ ಮಳೆ ಪ್ರಮಾಣ ಸಾಕಷ್ಟು ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಯಲ್ಲೇ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆಗೆ ಆದರೆ ಇಂದು ಮತ್ತು ನಾಳೆ ಯೆಲ್ಲೋ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ನಡುವೆ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ನೂರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಕೃಷ್ಣಾ ಹಾಗೂ ಉಪ ನದಿಗಳು, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳು ಉಕ್ಕಿ ಹರಿಯುತ್ತಿವೆ.

ಘಟಪ್ರಭಾ ಹಾಗೂ ಮಲಪ್ರಭಾ ನದಿಗೆ ಜಲಾಶಯಗಳಿಂದ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ಹಲವರು ಮನೆ ತೊರೆದು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ನಿರಂತರ ಮಳೆಯಿಂದ ಬೆಳಗಾವಿ ತಾಲೂಕಿನಲ್ಲಿ ಮಾರ್ಕಂಡೆಯ ಹಾಗೂ ಬಳ್ಳಾರಿ ನಾಲಾ ಉಕ್ಕಿ ಹರಿಯುತ್ತಿದ್ದು ಅಕ್ಕಪಕ್ಕದ ಕೃಷಿ ಭೂಮಿಗೆ ನೀರು ನುಗ್ಗಿ ಹಾನಿಯಾಗಿದೆ.

ಬೆಳಗಾವಿ ತಾಲೂಕಿನಲ್ಲಿ ಸೆ.1ರಿಂದ 11ರವರೆಗೆ ಒಟ್ಟು 156 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ ಎಂದು ತಹಸೀಲ್ದಾರ್ ಮಾಹಿತಿ ನೀಡಿದ್ದಾರೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ಮಳೆಯ ವಾತಾವರಣ ಮುಂದುವರಿದಿರುವುದು ಕೃಷಿಕರ ಆತಂಕಕ್ಕೆ ಕಾರಣವಾಗಿದೆ. ಶೀತ ವಾತಾವರಣದಿಂದಾಗಿ ತೋಟಗಾರಿಕೆ ಬೆಳೆಗಳ ಫಸಲು ಹಾಳಾಗುತ್ತಿದ್ದು, ಆರ್ಥಿಕ ಪರಿಸ್ಥಿತಿ ಏರುಪೇರಾಗುವ ಸಾಧ್ಯತೆ ಇದ್ದು, ವಾರ್ಷಿಕ ನಿರ್ವಹಣೆ ಕೆಲಸವೂ ನನೆಗುದಿಗೆ ಬಿದ್ದಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದಕ್ಕೆ ಹವಾಮಾನ ಪರಿಸ್ಥಿತಿಗಳಲ್ಲಿನ ಅನಿರೀಕ್ಷಿತ ಬದಲಾವಣೆ ಕಾರಣ ಎಂದು ಇಲಾಖೆ ಹೇಳಿದೆ. ಹಾಗಾಗಿ ಇನ್ನೂ 2 ದಿನ ಕೊಡಗಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ವಿಧಾನಸಭೆಯಲ್ಲಿ ಚರ್ಚೆ: ಈ ನಡುವೆ ರಾಜ್ಯದಲ್ಲಿ ಮಳೆ ಹಾಗೂ ಪ್ರವಾಹದಿಂದ ಅಪಾರ ಹಾನಿ ಆಗಿದ್ದು, ಜನರ ಸಂಕಷ್ಟದ ಬಗ್ಗೆ ವಿಧಾನಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್‌ನ ವೆಂಕಟರಾವ್ ನಾಡಗೌಡ, ಸಚಿವ ಜೆ.ಸಿ. ಮಾಧುಸ್ವಾಮಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಉಂಟಾಗಿರುವ ಮಳೆ ಹಾನಿ ಬಗ್ಗೆ ಗಂಭೀರ ಚರ್ಚೆ ನಡೆಯಬೇಕಿದ್ದು, ಹೆಚ್ಚಿನ ಸಮಯಾವಕಾಶ ಕಲ್ಪಿಸಬೇಕು ಎಂದು ಪ್ರತಿಪಕ್ಷಗಳು ಪ್ರಸ್ತಾಪಿಸಿದವು. ಇದಕ್ಕೆ ಸರಕಾರವೂ ಸಮ್ಮತಿಸಿದ್ದು, 2-3 ದಿನ ಚರ್ಚೆಗೆ ಅವಕಾಶ ನೀಡುವ ಬಗ್ಗೆ ತೀರ್ಮಾನಿಸಲಾಯಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com