ಬೆಂಗಳೂರು: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಅಧ್ಯಕ್ಷ ಕೆ. ರಾಮಕೃಷ್ಣ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಶನಿವಾರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002ರ ಅಡಿಯಲ್ಲಿ ಬಂಧಿಸಿದ್ದಾರೆ.
ರಾಮಕೃಷ್ಣ ಅವರು 1000 ಕೋಟಿ ರೂಪಾಯಿಗೂ ಹೆಚ್ಚು ಸಾರ್ವಜನಿಕ ಠೇವಣಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದಾರೆ.
ಚಾಲ್ತಿಯಲ್ಲಿರುವ ಮಾರುಕಟ್ಟೆ ದರಗಳಿಗಿಂತ ಹೆಚ್ಚಿನ ಬಡ್ಡಿದರದ ಭರವಸೆ ನೀಡಿ ಬ್ಯಾಂಕ್‌ನಲ್ಲಿ ಠೇವಣಿ ಇರಿಸುವಂತೆ ಮಾಡಿ, ಆ ಹಣವನ್ನು ಬ್ಯಾಂಕ್ ಉದ್ಯೋಗಿಗಳು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಕೆ. ರಾಮಕೃಷ್ಣ ಅವರು ಬ್ಯಾಂಕ್‌ನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 2,876 ಮಂದಿಗೆ 1,544.43 ಕೋಟಿ ರೂಪಾಯಿಯನ್ನು ಸಾಲವಾಗಿ ನೀಡಲಾಗಿದೆ. ಇದರಲ್ಲಿ 892.85 ಕೋಟಿ ರೂಪಾಯಿಯನ್ನು ಬೋಗಸ್ ದಾಖಲೆಗಳಿಗೆ ಸಾಲವಾಗಿ ನೀಡಲಾಗಿದೆ ಎಂದು ಇವರ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೊದಲಿಗೆ ದೂರು ದಾಖಲಾಗಿತ್ತು.
ದೂರಿನ ಆಧಾರದ ಮೇಲೆ, ರಾಮಕೃಷ್ಣ ಮತ್ತು ಇತರರ ವಿರುದ್ಧ ಬಸವನಗುಡಿ ಪೊಲೀಸರು ಹಣಕಾಸು ಸಂಸ್ಥೆಗಳಲ್ಲಿ ಬಡ್ಡಿ ಠೇವಣಿದಾರರ ಕರ್ನಾಟಕ ಸಂರಕ್ಷಣಾ ಕಾಯ್ದೆ, 2004 ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಕಲಿ ಖಾತೆಗಳನ್ನು ಸೃಷ್ಟಿಸಿ, ಸಾಲಕ್ಕೆ ಸೂಕ್ತ ಭದ್ರತೆಯನ್ನು ಪಡೆಯದೆ ಬ್ಯಾಂಕ್ ಸಿಬ್ಬಂದಿ ಸೇರಿದಂತೆ ವಿವಿಧ ವ್ಯಕ್ತಿಗಳಿಗೆ ಹಣವನ್ನು ನೀಡಲಾಗಿದೆ. ರಾಮಕೃಷ್ಣ ಅವರ 45 ಕೋಟಿ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಲಾಗಿದ್ದು, ಅವರನ್ನು ಐದು ದಿನಗಳ ಕಾಲ ಇ.ಡಿ ಕಸ್ಟಡಿಗೆ ಕಳುಹಿಸಲಾಗಿದೆ.
Advertisement