ಉತ್ತರ ಕನ್ನಡಕ್ಕೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ; ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ: ಸಚಿವ ಸುಧಾಕರ್‌

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಪ್ರಕಟಿಸಿದರು.
ಸಚಿವ ಸುಧಾಕರ್
ಸಚಿವ ಸುಧಾಕರ್

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಪ್ರಕಟಿಸಿದರು. ಈ ಮೂಲಕ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗೆ ಮನ್ನಣೆ ದೊರೆತಿದೆ.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಪಾಲ್ಗೊಂಡ ಬಳಿಕ, ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಉತ್ತರ ಕನ್ನಡ ಜಿಲ್ಲೆಗೆ ಉತ್ಕೃಷ್ಟವಾದ ಆರೋಗ್ಯ ಸೇವೆ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಎಲ್ಲಿ ನಿರ್ಮಿಸಬೇಕು, ಹೇಗೆ ನಿರ್ಮಾಣ ಮಾಡಬೇಕು ಎಂಬೆಲ್ಲ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಈ ಪ್ರಸ್ತಾವ ಆರ್ಥಿಕ ಇಲಾಖೆಯವರೆಗೆ ಹೋಗಿದೆ. ಇನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಚಿವ ಸಂಪುಟದಲ್ಲಿ ಪ್ರಸ್ತಾವ ಇರಿಸಲಾಗುವುದು ಎಂದು ಮಾಹಿತಿ ನೀಡಿದರು.

ಕುಮಟ ಪ್ರದೇಶ ಉತ್ತರ ಕನ್ನಡ ಜಿಲ್ಲೆಯ ಮಧ್ಯಭಾಗದಲ್ಲಿದ್ದು, ಅಲ್ಲಿಯೇ ಆಸ್ಪತ್ರೆ ನಿರ್ಮಿಸುವ ಬಗ್ಗೆಯೂ ಚರ್ಚೆಯಾಗಿದೆ. ಶಿರಸಿಯಲ್ಲಿ ಈಗಾಗಲೇ 250 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಾಮಗಾರಿ ಭರದಿಂದ ನಡೆಯುತ್ತಿದೆ. ಕಾರವಾರದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಿದ್ದು, ಮುಂದಿನ ವರ್ಷಕ್ಕೆ ಆ ಕಾಮಗಾರಿಯೂ ಮುಗಿಯಲಿದೆ. ಅಲ್ಲಿ ಈ ವರ್ಷವೇ 150 ವಿದ್ಯಾರ್ಥಿಗಳಿಗೆ ಬೋಧಿಸಲು ಎನ್‌ಎಂಸಿಯಿಂದ ಪರವಾನಗಿ ದೊರೆತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ಕೃಷ್ಟವಾದ ಆರೋಗ್ಯ ಸೇವೆ ನೀಡುವುದು, ಆರೋಗ್ಯ ಸೇವೆ ಮೇಲ್ದರ್ಜೆಗೇರಿಸುವುದು, ಸಿಬ್ಬಂದಿ ಕೊರತೆ ನೀಗಿಸುವುದು, ಉಪಕರಣಗಳ ಪೂರೈಕೆ, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದರು.

ಅಧಿವೇಶನ ಮುಗಿದ ಬಳಿಕ ಸಚಿವ ಡಾ.ಕೆ.ಸುಧಾಕರ್‌ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಸಚಿವ ಶಿವರಾಮ್‌ ಹೆಬ್ಬಾರ್‌, ಶಾಸಕರು ಸಭೆಯಲ್ಲಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com