ಪ್ರವೀಣ್ ನೆಟ್ಟಾರು ಹತ್ಯೆ: ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶಕ್ಕೆ ಇದ್ದ ನಿರ್ಬಂಧ ರದ್ದುಗೊಳಿಸಿದ ಹೈಕೋರ್ಟ್
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಹೇರಲಾಗಿದ್ದ ನಿರ್ಬಂಧಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
Published: 21st September 2022 03:07 PM | Last Updated: 21st September 2022 03:09 PM | A+A A-

ಪ್ರಮೋದ್ ಮುತಾಲಿಕ್
ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಹೇರಲಾಗಿದ್ದ ನಿರ್ಬಂಧಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಪ್ರಕ್ಷುಬ್ಧಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ಗೆ ಸ್ಥಳೀಯ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್ ರದ್ದುಪಡಿಸಿದೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ: ಬೊಮ್ಮಾಯಿ
ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧ ಪ್ರಶ್ನಿಸಿ ಮುತಾಲಿಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಈ ಆದೇಶ ನೀಡಿದೆ. ಮುಂದುವರೆದು, ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ವಗಾವಣೆ ಮಾಡಿ, ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.
ಜಿಲ್ಲಾಡಳಿತ ಹೊರಡಿಸಿರುವ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 144 ಪ್ರಕಾರ ಎರಡು ತಿಂಗಳ ಅವಧಿಗೆ ಮಾತ್ರ ನಿರ್ಬಂಧ ವಿಧಿಸಲು ಅವಕಾಶವಿದೆ. ಇದಾಗಲೇ ಈ ಅವಧಿ ಮುಗಿದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ನ್ಯಾಯಾಲಯವು ಅರ್ಜಿದಾರರ ವಾದ ಆಲಿಸಿ ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸಬಹುದು ಎಂದು ಹೈಕೋರ್ಟ್ ತಿಳಿಸಿತು.