ಡಿಕೆಶಿ ಕಳುಹಿಸಿದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದ ಲಕ್ಷ್ಮಣ್ ಸವದಿ: ಬಿಜೆಪಿಗಿಂದು ಗುಡ್​ಬೈ ಹೇಳುವ ಸಾಧ್ಯತೆ

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡದ ಬಿಜೆಪಿ ವಿರುದ್ಧ ತೀವ್ರವಾಗಿ ಅಸಮಾಧಾನಗೊಂಡಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು, ಬಿಜೆಪಿಗೆ ಗುಡ್ ಬೈ ಹೇಳಿ, ಕಾಂಗ್ರೆಸ್'ಗೆ ಸೇರ್ಪಡೆಗೊಳ್ಳುವ ಸಾಧ್ಯತೆಗಳು ಸ್ಪಷ್ಟವಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ.
ವಿಮಾನ ನಿಲ್ದಾಣದಲ್ಲಿ ಲಕ್ಷ್ಮಣ್ ಸವದಿ.
ವಿಮಾನ ನಿಲ್ದಾಣದಲ್ಲಿ ಲಕ್ಷ್ಮಣ್ ಸವದಿ.

ಬೆಂಗಳೂರು: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡದ ಬಿಜೆಪಿ ವಿರುದ್ಧ ತೀವ್ರವಾಗಿ ಅಸಮಾಧಾನಗೊಂಡಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು, ಬಿಜೆಪಿಗೆ ಗುಡ್ ಬೈ ಹೇಳಿ, ಕಾಂಗ್ರೆಸ್'ಗೆ ಸೇರ್ಪಡೆಗೊಳ್ಳುವ ಸಾಧ್ಯತೆಗಳು ಸ್ಪಷ್ಟವಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ.

ಸವದಿ ಅವರು ಬೆಂಗಳೂರಿಗೆ ಬರಲು ಡಿಕೆ.ಶಿವಕುಮಾರ್ ಅವರು ವಿಶೇಷ ವಿಮಾನವನ್ನು ಬುಕ್ ಮಾಡಿದ್ದು, ವಿಶೇಷ ವಿಮಾನದ ಟಿಕೆಟ್ ಡಿಕೆ ಶಿವಕುಮಾರ್ ಅವರ ಹೆಸರಿನಲ್ಲಿದೆ ಎಂದು ಹೇಳಲಾಗುತ್ತಿದೆ.

ಸವದಿಯನ್ನು ಬೆಂಗಳೂರಿಗೆ ಕರೆತರಲು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಜವಾಬ್ದಾರಿ ನೀಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೀಡಿದ ಜವಾಬ್ದಾರಿಯನ್ನು ಲಕ್ಷ್ಮ ಹೆಬ್ಬಾಳ್ಕರ್ ಅವರು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.

ಈಗಾಗಲೇ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಲಕ್ಷ್ಮಣ್ ಸವದಿ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಲಕ್ಷ್ಮಣ ಸವದಿ ಅವರೊಂದಿಗೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಾಣಿಸಿಕೊಂಡಿದ್ದು, ಇದರೊಂದಿಗೆ ಸವದಿಯವರು ಕಾಂಗ್ರೆಸ್'ಗೆ ಸೇರ್ಪಡೆಗೊಳ್ಳುವುದನ್ನು ಬಹುತೇಕ ಖಚಿತಪಡಿಸಿದೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸವದಿಯವರು, ಬೆಂಗಳೂರಿಗೆ ಹೋಗಿ ಸಾಧಕ, ಬಾಧಕ ಚರ್ಚೆ ಮಾಡುತ್ತೇನೆ. ಇದಾದ ಮೇಲೆ ಒಂದು ನಿರ್ಣಯ ಕೈಗೊಳ್ಳುತ್ತೇನೆ. ವಿಧಾನ ಪರಿಷತ್ ಸ್ಥಾನ ಮತ್ತು ಪಕ್ಷಕ್ಕೆ ರಾಜೀನಾಮೆ ಕೊಡಬೇಕು. ಇನ್ನೂ ಹಂಗಿನಲ್ಲಿ ಇದ್ದೇನೆ, ಅದರಿಂದ ಹೊರಬರಬೇಕು. ಬಳಿಕ ಏನು ಮಾಡಬೇಕು ಎನ್ನುವ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್, ಜೆಡಿಎಸ್​​ನಿಂದ ಆಹ್ವಾನ ಇದೆ. ಸಂಜೆಯವರೆಗೆ ಒಂದು ತೀರ್ಮಾನಕ್ಕೆ ಬರುತ್ತೇನೆ. ಏಪ್ರಿಲ್ 17 ಇಲ್ಲವೇ 18 ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಕ್ಷೇತ್ರದ ಜನರ ಒಪ್ಪಿಗೆ ಪಡೆದಿದ್ದೇನೆ. ಖಾಸಗಿಯಾಗಿಯೂ ಅನೇಕರು ತಮ್ಮ ನಿರ್ಧಾರವನ್ನು ಹೇಳಿದ್ದಾರೆ.

ಹೈಕಮಾಂಡ್ ಸಂಪರ್ಕದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಮನೆ ಬಿಟ್ಟು ಹೊರಗೆ ಬಂದ ಮೇಲೆ ಸಂಪರ್ಕ ಮಾಡಿದರೇನು, ಬಿಟ್ಟರೇನು ಎಂದು ತಿಳಿಸಿದರು.

ನನ್ನ ಸಂಪರ್ಕಕ್ಕೆ ಬಿ.ಎಲ್.ಸಂತೋಷ ಬಹಳ ಪ್ರಯತ್ನ ಪಟ್ಟರು. ಕೆಲ ಮುಖಂಡರನ್ನೂ ಸಹ ಕಳಿಸಿದರು. ಆಜ್ಞೆಯನ್ನು ಪಾಲಿಸುವುದು ಕಷ್ಟ, ಬಿಡುವುದು ಕಷ್ಟ. ಬಿ‌.ಎಲ್.ಸಂತೋಷ ನನ್ನ ಗುರು, ನನ್ನನ್ನು ಕ್ಷಮಿಸಿ ಎಂದು ಹೇಳುತ್ತೇನೆ. ಅವರಿಂದ ಯಾವುದೇ ಅನ್ಯಾಯ ಆಗಿಲ್ಲ, ಕಷ್ಟ ಕಾಲದಲ್ಲಿ ನೆರವು ಕೊಟ್ಟಿದ್ದಾರೆಂದರು.

ಅಥಣಿ ಕೆಲ ಪ್ರದೇಶ ನೀರಾವರಿಯಿಂದ ವಂಚಿತಗೊಂಡಿದೆ. ನೀರಾವರಿ ಸೌಲಭ್ಯ ಕಲ್ಪಿಸಬೇಕು ಎನ್ನುವುದು ನನ್ನ ಆಸೆ. ವೈಯಕ್ತಿಕ ಬೇಡಿಕೆ ಅಲ್ಲ, ನೀರಾವರಿ ಬೇಡಿಕೆ ಇಡುತ್ತೇನೆ‌ ಎಂದರು.

ಈ ನಡುವೆ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹೇಳಲಾಗುತ್ತಿದೆ. ಆದರೆ, ಲಕ್ಷ್ಮಣ ಸವದಿ ಮುಂದಿನ ನಡೆ ಏನು ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಆದರೆ, ಇಂದು ಬೆಳಗ್ಗೆ ಕಾಂಗ್ರೆಸ್ ಶಾಸಕ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಮತ್ತು ವಿಧಾನ ಪರಿಷತ್ ಸದಸ್ಯ ಚೆನ್ನರಾಜ್ ಹಟ್ಟಿಹೊಳಿ ಜೊತೆಗೆ ಲಕ್ಷ್ಮಣ ಸವದಿ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿದಿದ್ದು, ಲಕ್ಷ್ಮಣ ಸವದಿ ಮತ್ತು ಚನ್ನರಾಜ್ ಹಟ್ಟಿಹೊಳಿ ಬೆಳಗಾವಿ ವಿಮಾನದಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವುದು ಅನುಮಾನಗಳಿಗೆ ಪುಷ್ಠಿ ನೀಡಿದಂತಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com