ಅವ್ಯವಹಾರ ಆರೋಪ: ದೇವರಾಜ ಅರಸು ಟರ್ಮಿನಲ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು: 55 ಕೋಟಿ ರೂ ಅವ್ಯವಹಾರ ಆರೋಪದ ಮೇರೆಗೆ ದೇವರಾಜ ಅರಸು ಟರ್ಮಿನಲ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.
ಮೂಲಗಳ ಪ್ರಕಾರ ಕಾಮಗಾರಿಯನ್ನೇ ನಡೆಸದೆ ಬರೊಬ್ಬರಿ 55 ಕೋಟಿ ರೂ ಬಿಲ್ ಪಾವತಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ತೀವ್ರ ಶೋಧ ನಡೆಸುತ್ತಿದ್ದಾರೆ. ಶಾಂತಿನಗರದ ಬಿಎಂಟಿಸಿ ಕಟ್ಟಡದಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕಾಮಗಾರಿಯೊಂದಕ್ಕೆ ಮಂಜೂರಾಗಿದ್ದ 55 ಕೋಟಿ ರೂ ಅನ್ನು ಸಂಸ್ಥೆಯ ಅಧ್ಯಕ್ಷ ಡಿ.ಎಸ್. ವೀರಯ್ಯ ಮತ್ತು ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಅಕ್ರಮವಾಗಿ ವರ್ಗಾವಣೆ ಮಾಡಲು ಪ್ರಯತ್ನಿಸುತ್ತಿರುವ ಕುರಿತು ಲೋಕಾಯುಕ್ತ ಸಂಸ್ಥೆಗೆ ದೂರು ಸಲ್ಲಿಕೆಯಾಗಿತ್ತು. ಈ ಕುರಿತು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದರು. ಆರೋಪದಲ್ಲಿ ಮೇಲ್ನೋಟಕ್ಕೆ ಸತ್ಯಾಂಶವಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಲೋಕಾಯುಕ್ತದ ಬೆಂಗಳೂರು ನಗರ ಎಸ್ ಪಿ ಕೆ.ವಿ. ಅಶೋಕ್ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ