
ತುಮಕೂರು: ಕೊರಟಗೆರೆ ವಿಧಾನಸಭಾ ಕ್ಷೇತ್ರದ ಹಳ್ಳಿಯೊಂದರಲ್ಲಿ ರೋಡ್ ಶೋ ವೇಳೆ ಕಿಡಿಗೇಡಿಗಳು ಎಸೆದ ಕಲ್ಲಿನಿಂದ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಶನಿವಾರ ತಿಳಿಸಿದ್ದಾರೆ.
ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ಶುಕ್ರವಾರ ದುಷ್ಕರ್ಮಿಯೊಬ್ಬ ಕಲ್ಲು ತೂರಾಟ ನಡೆಸಿದ್ದರಿಂದ ರಾಜ್ಯ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರ ತಲೆಗೆ ಆಳವಾದ ಗಾಯವಾಗಿತ್ತು.
ಪರಮೇಶ್ವರ್ ಅವರು ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕೊರಟಗೆರೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಗಾಯದ ನಂತರ, ತೀವ್ರ ರಕ್ತಸ್ರಾವವಾಗುತ್ತಿದ್ದರಿಂದ ಪರಮೇಶ್ವರ ಅವರನ್ನು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ವೈದ್ಯರ ತಂಡ ಈಗ ಅವರ ನಿವಾಸದಲ್ಲಿ ಅವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದೆ.
Advertisement