ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ; ಮೃತರ ಸಂಖ್ಯೆ ಐದಕ್ಕೆ ಏರಿಕೆ, 16 ಮಂದಿ ಸ್ಥಿತಿ ಗಂಭೀರ

ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಶುಕ್ರವಾರ ವರದಿಯಾದ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದ್ದು, ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 36 ರಿಂದ 149 ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಚಿತ್ರದುರ್ಗ: ಇಲ್ಲಿನ ಕವಾಡಿಗರಹಟ್ಟಿಯಲ್ಲಿನ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 36 ರಿಂದ 149ಕ್ಕೆ ಏರಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಕನಿಷ್ಠ 16 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬೆಳವಣಿಗೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವಾಂತಿ ಭೇದಿಯಿಂದ ಬಳಲುತ್ತಿದ್ದ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಕವಾಡಿಗರಹಟ್ಟಿಯ ರುದ್ರಪ್ಪ (50) ಇಂದು ಬೆಳಗ್ಗೆ ಸಾವಿಗೀಡಾಗಿದ್ದಾರೆ. 

ಇದೇ ವೇಳೆ, ಪಾರ್ವತಮ್ಮ (60) ಶುಕ್ರವಾರ ಕವಾಡಿಗರಹಟ್ಟಿಯ  ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಮೂರು ದಿನಗಳಿಂದ ಅವರು ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಗುಣಮುಖರಾಗುತ್ತಿದ್ದರಿಂದ ಆಸ್ಪತ್ರೆಯಿಂದ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಆದರೆ, ಪಾರ್ವತಮ್ಮ ಅವರು ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಸಾವಿಗೀಡಾಗಿದ್ದಾರೆ. 1 ವರ್ಷದ ಮಗು ಸೇರಿದಂತೆ ಪಾರ್ವತಮ್ಮ ಅವರ ಕುಟುಂಬದ ಒಂಬತ್ತು ಸದಸ್ಯರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಕಲುಷಿತ ನೀರು ಸೇವನೆ ಪ್ರಕರಣವು ಜುಲೈ 31ರಂದು ವರದಿಯಾಗಿತ್ತು. ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿ ನಿವಾಸಿಗಳಾದ ಮಂಜುಳಾ (23) ಮತ್ತು ರಘು (27) ಎಂಬುವವರು ಸಾವಿಗೀಡಾಗಿದ್ದಾರೆ. ಕಲುಷಿತ ನೀರು ಸೇವಿಸಿ 36 ಮಂದಿ ಅಸ್ವಸ್ಥರಾಗಿದ್ದು, ಜುಲೈ 30ರಂದು ಗ್ರಾಮಕ್ಕೆ ಸಂಬಂಧಿಕರನ್ನು ಭೇಟಿ ಮಾಡಲು ಬಂದಿದ್ದ ಪ್ರವೀಣ್, ಮರುದಿನ ವಡ್ಡರಸಿದ್ದನಹಳ್ಳಿಯಲ್ಲಿ ಮೃತಪಟ್ಟಿದ್ದಾರೆ.

ಚಿತ್ರದುರ್ಗ ಕ್ಷೇತ್ರವನ್ನು ಪ್ರತಿನಿಧಿಸುವ ಸಂಸದ, ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಮೃತ ರುದ್ರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

115 ಮಂದಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದ್ದು, 34 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನೀರಿನ ಮಾದರಿಯಲ್ಲಿ ಯಾವುದೇ ವಿಷಕಾರಿ ರಾಸಾಯನಿಕ ಪತ್ತೆಯಾಗಿಲ್ಲ ಎಂದು ಎಫ್‌ಎಸ್‌ಎಲ್ ವರದಿ ದೃಢಪಡಿಸಿದೆ. ಸ್ಥಳೀಯರೊಬ್ಬರ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾದ ಬಳಿಕ ಕಿಡಿಗೇಡಿಗಳು ನೀರಿಗೆ ವಿಷ ಬೆರೆಸಿರಬಹುದು ಎಂದು ಆರೋಪಿಸಲಾಗಿದೆ. ಆದರೆ, ನೀರು ಕಲುಷಿತಗೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ವರದಿ ದೃಢಪಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆ ಕುರಿತು ತನಿಖೆಗೆ ಆದೇಶಿಸಿದ್ದಾರೆ ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಎಇಇ ಆರ್. ಮಂಜುನಾಥ ಗಿರಡ್ಡಿ ಮತ್ತು ಜೆಇ ಎಸ್.ಆರ್. ಕಿರಣ್ ಕುಮಾರ್ ಅವರನ್ನು ಅಮಾನತುಗೊಳಿಸಲು ಅಧಿಕಾರಿಗಳು ಶಿಫಾರಸು ಮಾಡಿ ವರದಿ ಕಳುಹಿಸಿದ್ದಾರೆ. ಕವಾಡಿಗರಹಟ್ಟಿಯಲ್ಲಿ ವಾಲ್ವ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಸಿ.ಹೆಚ್. ಪ್ರಕಾಶ್ ಬಾಬು ಅವರನ್ನೂ ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com