ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರಿಗೆ ಆಗಮಿಸುತ್ತಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.
ಇಂದು ಮಧ್ಯಾಹ್ನ 12.30ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಹೆಲಿಕಾಪ್ಟರ್ನಲ್ಲಿ ತಮಿಳುನಾಡಿಗೆ ತೆರಳಲಿದ್ದಾರೆ. ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿಗ ದಂಪತಿ, ಮಾವುತರ ಜೊತೆ ರಾಷ್ಟಪತಿ ದ್ರೌಪದಿ ಮುರ್ಮು ಸಂವಾದ ನಡೆಸಲಿದ್ದಾರೆ. ಬಳಿಕ ಸಂಜೆ 5:45ಕ್ಕೆ ಮೈಸೂರಿಗೆ ಆಗಮಿಸಿ ಚೆನ್ನೈಯತ್ತ ಪ್ರಯಾಣ ಬೆಳೆಸಲಿದ್ದಾರೆ. ಮೈಸೂರು ಜಿಲ್ಲಾಡಳಿತ ರಾಷ್ಟ್ರಪತಿ ಮುರ್ಮು ಅವರ ಸ್ವಾಗತ ಕೋರಲು ಸಿದ್ಧತೆ ಮಾಡಿಕೊಂಡಿದೆ.
ಮಧುಮಲೈ ಹುಲಿಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರದಲ್ಲಿ ಆಸ್ಕರ್ ವಿಜೇತ, ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮನ್ ಮತ್ತು ಬೆಳ್ಳಿ ದಂಪತಿ ವಾಸ ಮಾಡುತ್ತಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೊಮ್ಮನ್ ದಂಪತಿಯನ್ನು ಭೇಟಿ ಮಾಡಲಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ತೆಪ್ಪಕಾಡಿಗೆ ಭೇಟಿ ಕೊಟ್ಟಿದ್ದರು.
ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಗುಂಡ್ಲುಪೇಟೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
Advertisement