ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ: ಬೆಂಗಳೂರು ವಿವಿಗೆ ಹೈಕೋರ್ಟ್ ನೋಟಿಸ್

ಪಿಎಚ್‌ಡಿ ಪ್ರವೇಶ ಪರೀಕ್ಷೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪಿಎಚ್‌ಡಿ ಪ್ರವೇಶ ಪರೀಕ್ಷೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪಿಎಚ್‌ಡಿ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆದಿ ಮಂಜುನಾಥ್ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕ ಸದಸ್ಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಹಲವು ಕೇಂದ್ರಗಳಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಪರೀಕ್ಷಾರ್ಥಿಗಳ ಗುರುತಿನ ಚೀಟಿ ಪರಿಶೀಲಿಸದೆ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕೆಲವು ವಿದ್ಯಾರ್ಥಿಗಳು ಮೊಬೈಲ್ ಅನ್ನು ಪರೀಕ್ಷಾ ಕೇಂದ್ರಕ್ಕೆ ಒಯ್ದಿದ್ದಾರೆ. ಮೊಬೈಲ್ ನಲ್ಲಿ ರಾಜಾರೋಷವಾಗಿ ಉತ್ತರಗಳನ್ನು ಹುಡುಕಿ ಬರೆದಿದ್ದಾರೆ. ಜತೆಗೆ ಈಗಾಗಲೇ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿಗಳೂ ಸಹ ಪರೀಕ್ಷಾ ಕೇಂದ್ರಗಳೊಳಗೆ ತೆರಳಿ ಅಕ್ರಮಗಳಿಗೆ ಸಹಾಯ ಮಾಡಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಅಲ್ಲದೆ, ಕಳೆದ ಏ.13ರಂದು ಪಿಎಚ್‌ಡಿ ಪ್ರವೇಶಕ್ಕೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವಂತೆ ವಿವಿ ಕುಲಪತಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮರು ಪರೀಕ್ಷೆ ನಡೆಸುವಂತೆ ನಿರ್ದೇಶನ ನೀಡಬೇಕು ಎಂದು ನ್ಯಾಯಪೀಠಕ್ಕೆ ಕೋರಿದರು.

ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com