ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳ ಪತ್ರ ಪ್ರಕರಣ: ಸಿಐಡಿ ತನಿಖೆಗೆ ಸರ್ಕಾರ ಆದೇಶ

ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರ ವಿರುದ್ಧ ಅಧಿಕಾರಿಗಳು ಪತ್ರ ಬರೆದಿದ್ದಾರೆ ಎನ್ನಲಾದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರ ವಿರುದ್ಧ ಅಧಿಕಾರಿಗಳು ಪತ್ರ ಬರೆದಿದ್ದಾರೆ ಎನ್ನಲಾದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ ಎಂದು ತಿಳಿದುಬಂದಿದೆ.

ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿಸಿ ಮಂಡ್ಯದ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದಾರೆನ್ನಲಾದ ಪತ್ರವೊಂದು ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗೃಹ ಸಚಿವರ ಜೊತೆ ಸಮಾಲೋಚನೆ ನಡೆಸಿದ್ದು, ಸುಧೀರ್ಘ ಚರ್ಚೆ ಬಳಿಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರಿಗೆ ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆʼ ಎಂದು ಹೇಳಿದರು.

ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೆಲಸ ನಿಲ್ಲಿಸಿ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆಂಬ ವಿಚಾರ ಕುರಿತು ಮಾತನಾಡಿ, ಕೆಲಸ ನಿಲ್ಲಿಸಿಲ್ಲ. ತನಿಖೆ ಆಗಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ. ಬಿಬಿಎಂಪಿ, ಬಿಡಿಎನಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಉಡುಪಿ ವಿಡಿಯೋ ಪ್ರಕರಣ ಕುರಿತು ಮಾತನಾಡಿ, ಪ್ರಕರಣ ಸಂಬಂಧ ಸಿಐಡಿಗೆ ವಹಿಸಿ ಆದೇಶ ಮಾಡಲಾಗಿದೆ. ಡಿವೈಎಸ್ಪಿ ಮಟ್ಟದ ಅಧಿಕಾರಿಗೆ ತನಿಖೆ ಮಾಡಲು ಸೂಚಿಸಲಾಗಿತ್ತು. ಆದರೆ, ಇನ್ನೂ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಸಿಐಡಿಗೆ ವಹಿಸಲಾಗಿದೆ ಎಂದರು.

ಇದೇ ವೇಳೆ ಶಾಸಕ ಯಶ್ ಪಾಲ್ ಸುವರ್ಣ ಅವರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 'ಸಿಐಡಿಗೆ ಕೊಟ್ಟರೂ ಬೇಡ ಎನ್ನುತ್ತಾರೆ. ಅವರ ಕಾಲದಲ್ಲಿ ಸಿಐಡಿಗೆ ಕೊಟ್ಟಿದ್ದ ಪ್ರಕರಣಗಳು ಮುಚ್ಚಿಹೋಗಿವೆಯೇ' ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com