ಬೆಂಗಳೂರಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ ಗೆ ನಿರ್ಬಂಧ; ನಿಯಮ ಮೀರಿದರೆ 50 ಸಾವಿರ ರೂ. ದಂಡ: ಡಿಸಿಎಂ

ಬೆಂಗಳೂರು ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್ ನಿರ್ಬಂಧ ಹೇರಲಾಗುವುದು, ಒಂದು ವೇಳೆ ನಿಯಮ ಮೀರಿದರೆ ಪಾಲಿಕೆ ಅಧಿಕಾರಿಗಳು ಎಫ್ಐಆರ್ ದಾಖಲಿಸಿ, ಒಂದು ಫ್ಲೆಕ್ಸ್ ಗೆ ತಲಾ 50 ಸಾವಿರ ದಂಡ ವಿಧಿಸಲಿದ್ದಾರೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 
ಡಿಸಿಎಂ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ
ಡಿಸಿಎಂ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರು ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್ ನಿರ್ಬಂಧ ಹೇರಲಾಗುವುದು, ಒಂದು ವೇಳೆ ನಿಯಮ ಮೀರಿದರೆ ಪಾಲಿಕೆ ಅಧಿಕಾರಿಗಳು ಎಫ್ಐಆರ್ ದಾಖಲಿಸಿ, ಒಂದು ಫ್ಲೆಕ್ಸ್ ಗೆ ತಲಾ 50 ಸಾವಿರ ದಂಡ ವಿಧಿಸಲಿದ್ದಾರೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 

ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಧಿಕೃತ ಫ್ಲೆಕ್ಸ್ ತೆರವಿಗೆ ಕೋರ್ಟ್ ಮೂರು ವಾರಗಳ ಗಡವು ನೀಡಿದೆ. ರಾಜಕೀಯ ಪಕ್ಷಗಳ ನಾಯಕರು ಸೇರಿದಂತೆ ಎಲ್ಲ ಅನಧಿಕೃತ ಫ್ಲೆಕ್ಸ್ ಗಳನ್ನು ನಿಷೇಧಿಸಲಾಗುವುದು. ಈ ವಿಚಾರವಾಗಿ ನಮ್ಮ ಸಚಿವರು ಹಾಗೂ ನಾಯಕರಿಗೆ ಮನವಿ ಮಾಡಿದ್ದೇನೆ. ಫ್ಲೆಕ್ಸ್ ನಿಷೇಧ ಕುರಿತು ಮುಂದಿನ ದಿನಗಳಲ್ಲಿ ನೀತಿ ರೂಪಿಸುತ್ತೇವೆ ಎಂದರು. 

ಇನ್ನು ಮುಂದೆ ಜನ್ಮದಿನ, ಶ್ರದ್ಧಾಂಜಲಿ, ಶುಭ ಸಂದೇಶ, ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ವಿಚಾರ ಸೇರಿದಂತೆ ಯಾವುದೇ ಅನಧಿಕೃತ ಫ್ಲೆಕ್ಸ್ ಹಾಕುವಂತಿಲ್ಲ. ಇದಕ್ಕೆ ಎಲ್ಲಾ ಪಕ್ಷಗಳು ಹಾಗೂ ನಾಗರೀಕರು ಸಹಕರಿಸಬೇಕು ಎಂದು ಮನವಿ ಮಾಡಿದ ಡಿಸಿಎಂ, ಸರ್ಕಾರದಿಂದ ಫ್ಲೆಕ್ಸ್ ಹಾಕುವುದಿದ್ದರೆ, ಸಮಯ, ಅಳತೆ, ಸ್ಥಳ ನಿಗದಿ ಮಾಡಿ ಅನುಮತಿ ನೀಡಲಾಗುವುದು. ಇದಕ್ಕೂ ನೀತಿ ರೂಪಿಸಲಾಗುತ್ತಿದೆ. ಈಗಾಗಲೇ ನಗರದಲ್ಲಿ 59 ಸಾವಿರ ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲಾಗಿದೆ. 134 ದೂರುಗಳು ಬಂದಿದ್ದು, 40 ಎಫ್ಐಆರ್ ದಾಖಲಿಸಲಾಗಿದೆ ಖಾಸಗಿ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕಲು ನಿರ್ಬಂಧ ಇರುವುದಿಲ್ಲ. ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ತಿಳಿಸಿದರು. 

ಸಂಚಾರಿ ದಟ್ಟಣೆ ನಿಯಂತ್ರಣ: ಎಕ್ಸ್ ಪ್ರೆಷನ್ ಆಫ್ ಇಂಟರೆಸ್ಟ್ ಅವಧಿ ಆಗಸ್ಟ್ 17 ರವರೆಗೆ ವಿಸ್ತರಣೆ: “ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಟನಲ್ ರಸ್ತೆ, ಮೇಲ್ಸೇತುವೆ ಸೇರಿದಂತೆ ಪರಿಹಾರ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಇದಕ್ಕಾಗಿ ಬಿಡಿಎ ಹಾಗೂ ಬಿಬಿಎಂಪಿ ಮೂಲಕ ಎಕ್ಸ್ ಪ್ರೆಷನ್ ಆಫ್ ಇಂಟರೆಸ್ಟ್ ಆಹ್ವಾನಿಸಲಾಗಿತ್ತು. ಅದರ ಅವಧಿ ನಿನ್ನೆಗೆ ಮುಕ್ತಾಯಗೊಂಡಿತ್ತು. ಆದರೆ ಇನ್ನು ಹೆಚ್ಚಿನ ಸಂಸ್ಥೆಗಳು ಇದರಲ್ಲಿ ಭಾಗವಹಿಸಲು ಆಸಕ್ತಿ ತೋರಿರುವ ಹಿನ್ನೆಲೆಯಲ್ಲಿ ಈ ಅವಧಿಯನ್ನು ಒಂದು ವಾರ ಅಂದರೆ ಅ.17 ರವರೆಗೆ ವಿಸ್ತರಿಸಲಾಗಿದೆ. ಮೆಟ್ರೋ ಸುರಂಗದಲ್ಲಿ ಕೇವಲ ಒಂದು ಮಾರ್ಗದಲ್ಲಿ ಮಾತ್ರ ಚಲಿಸಬಹುದಾಗಿದೆ. ಹೀಗಾಗಿ ಟನಲ್ ರಸ್ತೆಯಲ್ಲಿ ದ್ವಿಮುಖ ಮಾರ್ಗ ಇರಬೇಕು ಎಂದು ಸಲಹೆ ನೀಡಿದ್ದೇನೆ. ಅನೇಕ ಸಂಸ್ಥೆಗಳು ವಿನ್ಯಾಸ, ಆರ್ಥಿಕ ಸಾಮರ್ಥ್ಯದ ಬಗ್ಗೆ ಚರ್ಚೆ ಮಾಡಲು ಮುಂದೆ ಬಂದಿವೆ.

ಬ್ರ್ಯಾಂಡ್ ಬೆಂಗಳೂರು ಹಾಗೂ ಬೆಂಗಳೂರಿನ ಸಂಚಾರಿ ದಟ್ಟಣೆ ಸಮಸ್ಯೆಯನ್ನು ಹೇಗೆ ಬಗೆಹರಿಸಬಹುದು ಎಂಬ ವಿಚಾರವಾಗಿ ನಾವು ಅನೇಕ ಸುತ್ತು ಚರ್ಚೆ ಮಾಡಿದ್ದೇವೆ. ಸಾರ್ವಜನಿಕರಿಂದ 70 ಸಾವಿರಕ್ಕೂ ಹೆಚ್ಚು ಸಲಹೆಗಳು ಬಂದಿದ್ದು, ಇನ್ನು ಕೆಲವರ ಜತೆ ಚರ್ಚೆ ಮಾಡಿ ಸಲಹೆ ಪಡೆಯಲಿದ್ದೇನೆ. ಶಾಲಾ ಮಕ್ಕಳಿಂದ, ಹಿರಿಯ ನಾಗರೀಕರು, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದವರಿಂದ ಸಲಹೆಗಳನ್ನು ಪಡೆದಿದ್ದು, ಇವನ್ನು ನಾಲ್ಕೈದು ವಿಭಾಗಗಳಲ್ಲಿ ಪರಿಶೀಲನೆ ಮಾಡಿ ಸಾರಾಂಶ ನೀಡುವ ಜವಾಬ್ದಾರಿಯನ್ನು ಕೆಲವು ಸಂಸ್ಥೆಗಳಿಗೆ ವಹಿಸಲಾಗಿದೆ ಎಂದರು. 

ದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದೇನೆ. ನೆಲಮಂಗಲ, ಬಳ್ಳಾರಿ, ಕೋಲಾರ, ಹೊಸೂರು, ಮೈಸೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿಗಳು ಸೇರುವ ಹಾಗೂ ಬೆಂಗಳೂರು ನಗರದ ರಸ್ತೆಗಳು ಸಂಚಾರದಟ್ಟಣೆಗೆ ಕಾರಣವಾಗಿವೆ. ಇದರ ಪರಿಹಾರಕ್ಕೆ ಕೇಂದ್ರ ಸರ್ಕಾರ ಕೂಡ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದೇನೆ. ಯೋಜನೆ ರೂಪಿಸಿಕೊಂಡು ಬನ್ನಿ ಎಂದು ಅವರು ತಿಳಿಸಿದ್ದಾರೆ ಎಂದು ಡಿಸಿಎಂ ತಿಳಿಸಿದರು. 

ರಾಜ್ಯಪಾಲರಿಗೆ ಗುತ್ತಿಗೆದಾರರು ಪತ್ರ ಬರೆಯುವುದರಲ್ಲಿ ತಪ್ಪಿಲ್ಲ: ಗುತ್ತಿಗೆದಾರರು ರಾಜ್ಯಪಾಲರಿಗೆ ಪತ್ರಬರೆದಿರುವುದರಲ್ಲಿ ಯಾವುದೇ ತಪ್ಪಿಲ್ಲ. ಅವರು ರಾಜ್ಯಪಾಲರಿಗಾದರೂ ಪತ್ರ ಬರೆಯಲಿ, ವಿರೋಧ ಪಕ್ಷ ಅಥವಾ ಆಡಳಿತ ಪಕ್ಷದವರನ್ನು ಕೇಳಲಿ. ಅವರಿಗೆ ನೋವಾಗಿದೆ. ಕೇಳುವುದರಲ್ಲಿ ತಪ್ಪಿಲ್ಲ. ನಮಗೆ ಯಾರಿಗೂ ತೊಂದರೆ ನೀಡುವ ಇಚ್ಛೆ ಇಲ್ಲ. ಸರಿಯಾಗಿ ಕೆಲಸ ಮಾಡಿರುವ ಗುತ್ತಿಗೆದಾರರಿಗೆ ಹಣ ಸಿಗಬೇಕು ಎಂಬುದು ನಮ್ಮ ಉದ್ದೇಶ ಎಂದರು. 

ಕೆಲವು ಗುತ್ತಿಗೆದಾರರು ನಮ್ಮ ಮೇಲೆ ಪ್ರೀತಿ ಅಭಿಮಾನ ತೋರಿಸುತ್ತಿದ್ದಾರೆ. ಅದನ್ನು ಬ್ಲ್ಯಾಕ್ ಮೇಲ್ ಎನ್ನುವುದಿಲ್ಲ. ನಮಗೆ ಅನೇಕ ವರದಿಗಳು ಬಂದಿದ್ದು, ಅವುಗಳ ನೈಜತೆ ಪರಿಶೀಲನೆ ಮಾಡುತ್ತಿದ್ದೇವೆ. ಯಾರು ಸರಿಯಾಗಿ ಕೆಲಸ ಮಾಡಿದ್ದಾರೋ ಅವರಿಗೆ ಹಣ ಕೊಡಲು ನಾವು ಬದ್ಧರಾಗಿದ್ದೇವೆ. ಈ ವಿಚಾರವಾಗಿ ನಾನು ಖಾಲಿ ಮಾತನಾಡುವುದಿಲ್ಲ. ಈ ಬಗ್ಗೆ ಪ್ರತ್ಯೇಕವಾಗಿ ಮಾಧ್ಯಮಗಳ ಮುಂದೆ ದಾಖಲೆಗಳ ಸಮೇತ ಮಾತನಾಡುತ್ತೇನೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com