ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ: ಆ.21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್'ಗೆ ಬಿಜೆಪಿ ಕರೆ

ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಆಗಸ್ಟ್ 21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್'ಗೆ ಕರೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಆಗಸ್ಟ್ 21ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್'ಗೆ ಕರೆ ನೀಡಿದೆ.

ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಐದು ಜಿಲ್ಲೆಗಳ ಬಿಜೆಪಿ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಾಗಿದ್ದು, ಕಾವೇರಿ ಕೊಳ್ಳದ ಐದು ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣಗೌಡ ಅವರು, ಕುರುವಾಯಿ ಬೆಳೆಗೆ ತಮಿಳುನಾಡಿಗೆ ನೀರು ಬಿಡುವ ಮೂಲಕ ಕರ್ನಾಟಕ ಸರ್ಕಾರ ರಾಜ್ಯದ ರೈತರಿಗೆ ದ್ರೋಹ ಬಗೆದಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುಗಡೆ ಸ್ಥಗಿತಗೊಳಿಸಲು ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿಯ ಇತರ ಮುಖಂಡರು ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಗಳು, ರೈತರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಈ ಮಧ್ಯೆ, ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಟಿ.ನರಸೀಪುರ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಹಲವು ಕಬ್ಬು ಬೆಳಗಾರರನ್ನು ಶನಿವಾರ ಬಂಧನಕ್ಕೊಳಪಡಿಸಲಾಯಿತು.

ತಮಿಳುನಾಡಿಗೆ ನೀರು ಬಿಡುವುದರಿಂದ ಕಬಿನಿ ಅಚ್ಚುಕಟ್ಟು ಭಾಗದ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ತಮಿಳುನಾಡಿಗೆ ನೀರು ಬಿಡುತ್ತಿರುವುದರಿಂದ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಮತ್ತು ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಕೆಆರ್‌ಎಸ್‌ನಿಂದ 13 ಸಾವಿರ ಕ್ಯೂಸೆಕ್ ಸೇರಿದಂತೆ 20 ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರನ್ನು ಹೊರಬಿಡಲು ನೀರಾವರಿ ಅಧಿಕಾರಿಗಳು ಈ ಜಲಾಶಯಗಳ ಕ್ರೆಸ್ಟ್ ಗೇಟ್‌ಗಳನ್ನು ತೆರೆದಿದ್ದಾರೆ. ಕೆಆರ್‌ಎಸ್‌ನಲ್ಲಿ 112 ಅಡಿ ಇದ್ದ ನೀರಿನ ಮಟ್ಟ ಇದೀಗ 107 ಅಡಿಗೆ ಮತ್ತು ಕಬಿನಿಯಲ್ಲಿ 2291.7 ಅಡಿಯಿಂದ 2272 ಅಡಿಗೆ ಕುಸಿದಿದೆ ಎಂದು ಕಿಡಿಕಾರಿದರು.

ಒಗ್ಗಟ್ಟಿನ ಹೋರಾಟಕ್ಕೆ ಸಂಸದೆ ಸುಮಲತಾ ಕರೆ
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್ ಅವರು, ತಮಿಳುನಾಡಿಗೆ ಕಾವೇರಿ ನೀರು ಬಿಡುವ ಮೂಲಕ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಶನಿವಾರ ಮನವಿ ಮಾಡಿದ್ದಾರೆ.

ಪ್ರತಿ ಹಂತದಲ್ಲೂ ತಮಿಳುನಾಡು ಪರ ತೀರ್ಪು ಬಂದಿರುವುದರಿಂದ ಮಳೆ ಕೊರತೆಯಾದಾಗಲೆಲ್ಲ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ರೈತರಿಗೆ ಸಂಬಂಧಿಸಿದ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಮನವಿ ಮಾಡಿದರು.

ಕೇಂದ್ರವು ತಮಿಳುನಾಡು ಪರವಾಗಿರುವುದರಿಂದ ಒಗ್ಗಟ್ಟಿನ ಮೂಲಕ ಹೋರಾಟ ಮಾಡುವುದು ಮುಖ್ಯವಾಗಿದೆ. ಕಾವೇರಿ ವಿವಾದಕ್ಕೆ ದೀರ್ಘಾವಧಿಯ ಪರಿಹಾರವನ್ನು ಕಂಡುಕೊಳ್ಳಬೇಕಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com