ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗುರುವಾರದಿಂದ ವಿಮಾನಯಾನ ಸೇವೆ ಆರಂಭ: ಎಂಬಿ ಪಾಟೀಲ್

ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ (ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಎತ್ತರಕ್ಕೇರಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ತಿಳಿಸಿದ್ದಾರೆ.
ಇಂಡಿಗೋ ವಿಮಾನ
ಇಂಡಿಗೋ ವಿಮಾನ
Updated on

ಬೆಂಗಳೂರು: ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದಿಂದ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ (ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಎತ್ತರಕ್ಕೇರಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಮಂಗಳವಾರ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, 'ಇಂಡಿಗೋ ಸಂಸ್ಥೆಯ ವಿಮಾನವು ಗುರುವಾರ ಬೆಳಿಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.05ಕ್ಕೆ ಶಿವಮೊಗ್ಗ ತಲುಪಲಿದೆ. ಆರಂಭವಾಗಲಿರುವ ಮೊದಲ ಸೇವೆಯಲ್ಲಿ ತಾವೂ ಪ್ರಯಾಣಿಸಲಿದ್ದು, ಜೊತೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ‌ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಸೇರಿದಂತೆ ಮಲೆನಾಡು ಭಾಗದ ಜನಪ್ರತಿನಿಧಿಗಳೂ ಇರಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿದೊಡನೆಯೇ ವಾಟರ್‍‌ ಸೆಲ್ಯೂಟ್‌ ಮೂಲಕ ಸಂಭ್ರಮಾಚರಿಸಲಾಗುವುದು' ಎಂದಿದ್ದಾರೆ.

ಇದು ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಮೊದಲ ವಿಮಾನ ನಿಲ್ದಾಣವಾಗಿದ್ದು, ಇದಕ್ಕೆ ರಾಜ್ಯ ಸರ್ಕಾರವು 450 ಕೋಟಿ ರೂ. ವಿನಿಯೋಗಿಸಿದೆ. ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆ ಎಂಬಲ್ಲಿ 779 ಎಕರೆ ಜಾಗದಲ್ಲಿ ಏರ್‍‌ಪೋರ್ಟ್ ನಿರ್ಮಾಣವಾಗಿದ್ದು, ಇಲ್ಲಿ ಏರ್‍‌ಬಸ್‌ ಮಾದರಿ ವಿಮಾನಗಳೂ ಬಂದಿಳಿಯುವ ಅನುಕೂಲಗಳನ್ನು ಕಲ್ಪಿಸಲಾಗಿದೆ. ಇದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಶಿವಮೊಗ್ಗದಿಂದ ದೆಹಲಿ, ಮುಂಬೈ, ಹೈದರಾಬಾದ್, ಚೆನ್ನೈ, ಗೋವಾ ಮುಂತಾದ ನಗರಗಳಿಗೆ ನೇರ ವಿಮಾನ ಸಂಪರ್ಕ ಕಲ್ಪಿಸಲು ಪ್ರಯತ್ನಿಸಲಾಗುವುದು. ಸದ್ಯಕ್ಕೆ ಬೆಂಗಳೂರಿನಲ್ಲಿ ಈ ಸ್ಥಳಗಳಿಗೆ ಕನೆಕ್ಟಿಂಗ್‌ ವಿಮಾನಗಳು ಲಭ್ಯ ಇರಲಿವೆ. ಜೊತೆಗೆ, ಉಡಾನ್‌ ಯೋಜನೆಯಡಿ ವಿಮಾನಯಾನ ಸೇವೆ ವಿಸ್ತರಿಸಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅದು ಅಂತಿಮ ಹಂತದಲ್ಲಿದೆ ಎಂದರು.

ಮೂಲ ಯೋಜನೆಯಲ್ಲಿ ಈ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಸೌಲಭ್ಯ ಇರಲಿಲ್ಲ. ಈಗ ಅದನ್ನು ಪರಿಷ್ಕರಿಸಿ, ಆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. 4,340 ಚದರ ಮೀಟರ್ ವಿಸ್ತೀರ್ಣದ ಪ್ರಯಾಣಿಕರ ಟರ್ಮಿನಲ್‌ ಮತ್ತು 3,050 ಮೀಟರ್ ಉದ್ದದ ರನ್‌ವೇ ಇಲ್ಲಿದೆ. ಮುಂದಿನ ಮೂರು ವಾರಗಳ ವಿಮಾನಯಾನ ಟಿಕೆಟ್‌ ಮುಂಗಡ ಬುಕಿಂಗ್‌ ಆಗಿದ್ದು, ಒಳ್ಳೆಯ ಬೇಡಿಕೆ ಕಂಡುಬಂದಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com