ಚುನಾವಣಾ ಅಕ್ರಮ ಪ್ರಕರಣ: ಶಾಸಕ ರಿಜ್ವಾನ್‌ ಅರ್ಷದ್‌ಗೆ ನೋಟಿಸ್‌ ಜಾರಿ

ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಚುನಾವಣಾ ಅರ್ಜಿ ಸಲ್ಲಿಕೆಯಾಗಿದೆ.
ಶಾಸಕ ರಿಜ್ವಾನ್‌ ಅರ್ಷದ್‌
ಶಾಸಕ ರಿಜ್ವಾನ್‌ ಅರ್ಷದ್‌

ಬೆಂಗಳೂರು: ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಚುನಾವಣಾ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರು ಸಂಪಂಗಿ ರಾಮನಗರದ ನಿವಾಸಿ ಬಿ ಲಕ್ಷ್ಮಿದೇವಿ ಎಂಬುವವರು ಈ ಅರ್ಜಿ ಸಲ್ಲಿಸಿದ್ದು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಅರ್ಜಿಯು ವಿಚಾರಣೆಗೆ ಮಂಗಳವಾರ ಬಂದಿತ್ತು.

ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರ ವಾದವನ್ನು ಆಲಿಸಿದ ಪೀಠವು ಶಾಸಕ ರಿಜ್ವಾನ್ ಅರ್ಷದ್‌ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆಪ್ಟೆಂಬರ್‌ 19ಕ್ಕೆ ಮುಂದೂಡಿತು.

ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಗ್ಯಾರಂಟಿ ಯೋಜನೆಗಳು ಕೊಡುಗೆ ಹಾಗೂ ಭರವಸೆ ಸ್ವರೂಪದ್ದಾಗಿವೆ. ಗ್ಯಾರಂಟಿ ಯೋಜನೆಗಳನ್ನು ಪಕ್ಷದ ಅಭ್ಯರ್ಥಿಗಳ ಸಮ್ಮತಿಯೊಂದಿಗೆ ಪ್ರಕಟಿಸಲಾಗಿದೆ. ಅವು ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ. ಆ ಮೂಲಕ ರಿಜ್ವಾನ್ ಅರ್ಷದ್ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ. ಮತದಾರರಿಗೆ ಆಮಿಷವೊಡುವುದು ಲಂಚ ಮತ್ತು ಭ್ರಷ್ಟಚಾರಕ್ಕೆ ಸಮವಾಗಿದೆ ಎಂಬುದು ಅರ್ಜಿದಾರರ ಆಕ್ಷೇಪವಾಗಿದೆ.

ಕಾಂಗ್ರೆಸ್ ವತಿಯಿಂದ ಗ್ಯಾರಂಟಿ ಕಾರ್ಡ್ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿರುವುದು ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 123 (1) ಪ್ರಕಾರ ಮತ್ತು ಸೆಕ್ಷನ್ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ. ಹೀಗಾಗಿ, ಶಿವಾಜಿನಗರ ಕ್ಷೇತ್ರದಿಂದ ರಿಜ್ವಾನ್ ಅರ್ಷದ್ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು  ಅರ್ಜಿದಾರರು ಕೋರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com