ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ರಾಜ್ಯದ ಹಲವೆಡೆ ರೈತರ ಪ್ರತಿಭಟನೆ!

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ನಿರ್ದೇಶನ ಪಾಲಿಸಿ ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದಂತೆಯೇ ರಾಜ್ಯದ ದಕ್ಷಿಣ ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಸರ್ಕಾರದ ಕ್ರಮದ ವಿರುದ್ಧ ವಿವಿಧ ರೈತ ಸಂಘಟನೆಗಳು ಕಾವೇರಿ ಹೃದಯ ಭಾಗವಾದ ಮೈಸೂರು, ಮಂಡ್ಯ ಮತ್ತು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದವು. 
ರೈತರ ಪ್ರತಿಭಟನೆ
ರೈತರ ಪ್ರತಿಭಟನೆ

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ನಿರ್ದೇಶನ ಪಾಲಿಸಿ ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದಂತೆಯೇ ರಾಜ್ಯದ ದಕ್ಷಿಣ ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಸರ್ಕಾರದ ಕ್ರಮದ ವಿರುದ್ಧ ವಿವಿಧ ರೈತ ಸಂಘಟನೆಗಳು ಕಾವೇರಿ ಹೃದಯ ಭಾಗವಾದ ಮೈಸೂರು, ಮಂಡ್ಯ ಮತ್ತು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದವು. 

ಕರ್ನಾಟಕದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಸರ್ಕಾರ ಏನನ್ನೂ ಮಾಡುತ್ತಿಲ್ಲ. ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟದಲ್ಲಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪ್ರಮುಖ ಪಕ್ಷವಾಗಿರುವುದರಿಂದ ಅದರ ವಿರುದ್ಧ ಸರಿಯಾದ ಕಾನೂನು ಹೋರಾಟವನ್ನು ಸರಿಯಾಗಿ ನಡೆಸುತ್ತಿಲ್ಲ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. 

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆಗಸ್ಟ್ 28 ರಂದು ನೀಡಿದ್ದ ಆದೇಶದಂತೆ ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ಸ್ ನೀರನ್ನು ಕರ್ನಾಟಕ ಬುಧವಾರದಿಂದ ಬಿಡುಗಡೆ ಮಾಡಿದೆ. ಈ ಹಿಂದೆ ಪ್ರತಿನಿತ್ಯ 10,000 ಕ್ಯೂಸೆಕ್ ನೀರು ಬಿಡುವಂತೆ ಸಿಡಬ್ಲ್ಯುಎಂಎ ಕರ್ನಾಟಕಕ್ಕೆ ಆದೇಶ ನೀಡಿತ್ತು. ಕೆಲವು ದಿನಗಳ ನಂತರ ತನ್ನ ಆದೇಶವನ್ನು ಮರು ಪರಿಶೀಲಿಸುವಂತೆ ಕರ್ನಾಟಕ ಮಾಡಿದ ಮನವಿಯಂತೆ ಕರ್ನಾಟಕದ ಹಿತಾಸಕ್ತಿ ಪರಿಗಣಿಸಿ, ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಬಿಳಿಗುಂಡ್ಲುವಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬರುವಂತೆ ನೋಡಿಕೊಳ್ಳಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಪ್ರಾಧಿಕಾರದ ಆದೇಶದ ವಿರುದ್ಧ ಕರ್ನಾಟಕದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಕಾವೇರಿ ಮತ್ತು ಕಬಿನಿ ನದಿ ಮತ್ತು ಮೈಸೂರಿನ ಕೃಷ್ಣರಾಜ ಸಾಗರ ಅಣೆಕಟ್ಟು ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ರೈತರು ಗುರುವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಲಸಂಪನ್ಮೂಲ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಮೆರವಣಿಗೆ ನಡೆಸಿದರು.

ಶ್ರೀರಂಗಪಟ್ಟಣದಲ್ಲಿ ರೈತರು ಅಂಗಿ ತೆಗೆದು ಅರೆಬೆತ್ತಲು ಮೆರವಣಿಗೆ, ಪ್ರತಿಭಟನೆ ನಡೆಸಿದರು. ಕಾವೇರಿ ನದಿಯಲ್ಲಿ ನಿಂತು ಅಂಗೈಯಲ್ಲಿ ನೀರು ಹಿಡಿದುಕೊಂಡು ರಾಜ್ಯ ಸರ್ಕಾರ ರೈತ ವಿರೋಧಿ ನಿಲುವು ತಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಚಾಮರಾಜನಗರ ಜಿಲ್ಲೆಯಲ್ಲೂ ರೈತರು ಇದೇ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದರು.

ಈ ಮಧ್ಯೆ ತಮಿಳುನಾಡಿಗೆ ನೀರು ಬಿಡುಗಡೆ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನೆರೆ ರಾಜ್ಯದಲ್ಲಿ ಬಿಕ್ಕಟ್ಟು ಇಲ್ಲದಿರುವಾಗ ತಮಿಳುನಾಡು ಕರ್ನಾಟಕದ ಮೇಲೆ ಹೆಚ್ಚಿನ ನೀರು ಬಿಡುವಂತೆ ಒತ್ತಡ ಹೇರುತ್ತಿರುವುದು ಏಕೆ ಎಂದು ಪ್ರಶ್ನಿಸಿದರು. ಇಂದು ನಮಗೆ ನೀರಿನ ಸಮಸ್ಯೆ ಇದೆ ಮತ್ತು ಕೆಆರ್‌ಎಸ್ ಅಣೆಕಟ್ಟು ಖಾಲಿಯಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ತಮಿಳುನಾಡಿಗೆ ಸಾಕಷ್ಟು ನೀರಿದೆ. ಅವರು ಏಕೆ  ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಸರ್ಕಾರದ ನಿಲುವನ್ನು ನಾವು ಬೆಂಬಲಿಸುತ್ತೇವೆ ಎಂದು ಹೇಳಿದರು.

ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ನಿಲ್ಲಿಸಬೇಕು, ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿ ಕಾನೂನು ಹೋರಾಟ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಕರ್ನಾಟಕದಲ್ಲಿ ರೈತರ ಹಿತಾಸಕ್ತಿ ಮತ್ತು ಕುಡಿಯುವ ನೀರಿನ ಅಗತ್ಯತೆಗಳನ್ನು ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ''ಕಾವೇರಿ ವಿಚಾರದಲ್ಲಿ ಸರಕಾರ ಮೊದಲಿನಿಂದಲೂ ಎಡವಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಆದೇಶದಂತೆ ಪ್ರತಿನಿತ್ಯ 10 ಸಾವಿರ ಕ್ಯೂಸೆಕ್ ನೀರು ಬಿಡುವ ಮೂಲಕ ಈಗಾಗಲೇ ಸುಮಾರು 15 ಟಿಎಂಸಿ ನೀರು ಬಿಡಲಾಗಿದೆ. ಅದರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಸಿಡಬ್ಲ್ಯುಎಂಎ ಸೂಚನೆ ಮೇರೆಗೆ ಸರ್ಕಾರ ಈಗಾಗಲೇ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡಲು ಆರಂಭಿಸಿರುವಾಗ ಜಲಸಂಪನ್ಮೂಲ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗ ಕಾನೂನು ತಜ್ಞರೊಂದಿಗೆ ಚರ್ಚಿಸಿ ಪ್ರಯೋಜನವೇನು ಎಂದು ಬೊಮ್ಮಾಯಿ ಪ್ರಶ್ನಿಸಿದರು. ಹಿಂದಿನ ಆದೇಶದ ವಿರುದ್ಧ ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು. ಅದನ್ನೂ ಇನ್ನೂ ಮಾಡಿಲ್ಲ ಎಂದರು. ಇದೇ ವೇಳೆ  ನವದೆಹಲಿಯ ಕರ್ನಾಟಕ ಭವನ-1ರಲ್ಲಿ ಕಾವೇರಿ ವಿಚಾರವಾಗಿ ಕಾನೂನು ತಂಡ ಹಾಗೂ ಕರ್ನಾಟಕದ ಅಧಿಕಾರಿಗಳ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com