ಹುಸಿ ಬಾಂಬ್ ಇಮೇಲ್ ಗಳು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ: ನಗರ ಪೊಲೀಸ್ ಆಯುಕ್ತ ಬಿ ದಯಾನಂದ್
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಶುಕ್ರವಾರ ಬೆಳ್ಳಂಬೆಳಗ್ಗೆ ಇ-ಮೇಲ್ ಬಂದಿದೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಇ-ಮೇಲ್ ಗಂಭೀರವಾಗಿ ಪರಿಗಣಿಸಿದ್ದು, ಪರಿಶೀಲನೆ ಆರಂಭಿಸಿದ್ದಾರೆ.
ಶುಕ್ರವಾರ ಬಸವೇಶ್ವರ ನಗರ, ಯಲಹಂಕ, ಸದಾಶಿವ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕನೊಬ್ಬ ಇ-ಮೇಲ್ ಕಳಿಸಿದ್ದಾನೆ.
ಬಾಂಬ್ ಬೆದರಿಕೆ ಇ-ಮೇಲ್ ಕುರಿತು ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ. ಇ-ಮೇಲ್ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೆದರಿಕೆ ಇಮೇಲ್ ಗಳು ಬಂದಿರುವ ಶಾಲೆಗಳಿಗೆ ಧಾವಿಸಿದ್ದಾರೆ. ವಿದ್ಯಾರ್ಥಿಗಳನ್ನು ಹೊರಗೆ ಕಳಿಸಿ ಶಾಲೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ನಗರ ಪೊಲೀಸ್ ಆಯುಕ್ತರು ಹೇಳಿದ್ದೇನು?: ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಬಾಂಬ್ ಬೆದರಿಕೆ ಇ-ಮೇಲ್ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಇದೊಂದು ಹುಸಿ ಬಾಂಬ್ ಬೆದರಿಕೆ ಇಮೇಲ್ ಗಳು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಮ್ಮ ಪೊಲೀಸ್ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದರು.
ಈ ಹಿಂದೆಯೂ ಹಲವಾರು ಬಾರಿ ನಗರದ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ, ಇ-ಮೇಲ್ ಬಂದಿತ್ತು. ಅಂತಹ ಸಂದರ್ಭದಲ್ಲಿ ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸಿದಾಗ ಅದು ಹುಸಿ ಕರೆ ಎಂಬುದು ತಿಳಿದಿತ್ತು. ಇಂತಹ ಬೆದರಿಕೆ ಹಾಕಿದವರನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಮಕ್ಕಳು, ಪೋಷಕರು ಭಯ, ಆತಂಕ ಪಡುವ ಅಗತ್ಯವಿಲ್ಲ. ನಮ್ಮ ಸಿಬ್ಬಂದಿ ಪರಿಶೀಲನೆ ಮುಂದುವರೆಸಿದ್ದಾರೆ. ಇದು ಹುಸಿ ಬಾಂಬ್ ಕರೆ ಎಂಬುದು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು. ಕಳೆದ ವರ್ಷ ಇದೇ ದಿನ ನಗರದ 30 ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿತ್ತು. ಆಗ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದರು. ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ