ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ, ಪತ್ತೆಹಚ್ಚಿ ಕಠಿಣ ಶಿಕ್ಷೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಹಲವು ಖಾಸಗಿ ಶಾಲೆಗಳು ಮತ್ತು ನಂತರ ಮಧ್ಯಾಹ್ನವಾಗುತ್ತಿದ್ದಂತೆ ಸರ್ಕಾರಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿರುವ ಬಗ್ಗೆ ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. 
ಶಿಕ್ಷಣ ಸಚಿವ ಮಧು ಬಂಗಾರಪ್ಪ
ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಹಲವು ಖಾಸಗಿ ಶಾಲೆಗಳು ಮತ್ತು ನಂತರ ಮಧ್ಯಾಹ್ನವಾಗುತ್ತಿದ್ದಂತೆ ಸರ್ಕಾರಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿರುವ ಬಗ್ಗೆ ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. 

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ನಾನು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇನೆ. ಮಕ್ಕಳ ಸುರಕ್ಷತೆಯ ಬಗ್ಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ.ಬೆದರಿಕೆ ಬಂದಿರುವ ಶಾಲೆಗಳಿಗೆ ರಕ್ಷಣೆ ಕೊಡುತ್ತೇವೆ. ಈ ಬಗ್ಗೆ ಗೃಹ ಸಚಿವರ ಜೊತೆ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ. ಪೋಷಕರಿಗೆ ಬಹಳ ಆತಂಕ ಇರುತ್ತದೆ. ಯಾರು ಹೆದರುವುದು ಬೇಡ ಧೈರ್ಯವಾಗಿರಿ ಎಂದು ಸಚಿವರು ತಿಳಿಸಿದ್ದಾರೆ.

ಯಾವ್ಯಾವ ಶಾಲೆಗಳು?: ಬೆಂಗಳೂರಿನ ಬಸವೇಶ್ವರ ನಗರ, ಸದಾಶಿವನಗರ ಮತ್ತು ಯಲಹಂಕದ ಶಾಲೆಗಳಿಗೆ ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ವರದಿಗಳ ಪ್ರಕಾರ, ಬಸವೇಶ್ವರ ನಗರದ ನ್ಯಾಫಲ್, ಚಿತ್ರಕೂಟ, ಕೌಶಲ್ಯ, ವಿದ್ಯಾಶಿಲ್ಪಿ ಶಾಲೆ, ಚಾಮರಾಜಪೇಟೆ ಭವನ್ ಪ್ರೆಸ್ ಸ್ಕೂಲ್, ಇನ್ವೆಂಚರ್ ಶಾಲೆ, ಸದಾಶಿವನಗರದ ನೀವ್ ಶಾಲೆ, ಅನೇಕಲ್ ಗ್ರೀನ್ ಹುಡ್ ಶಾಲೆ, ಬನ್ನೇರುಘಟ್ಟದ ಗ್ಲೋಬಲ್ ಇಂಟರ್ ನ್ಯಾಷನಲ್ ಶಾಲೆ ಮತ್ತು ಯಲಹಂಕದ ಒಂದು ಶಾಲೆಗೆ ಬೆದರಿಕೆ ಸಂದೇಶ ಬಂದಿದೆ. ಇದರ ಜೊತೆಗೆ ಮಧ್ಯಾಹ್ನವಾಗುತ್ತಿದ್ದಂತೆ ಬೆಂಗಳೂರಿನಲ್ಲಿರುವ ಕೆಲವು ಸರ್ಕಾರಿ ಶಾಲೆಗಳಿಗೆ ಸಹ ಬೆದರಿಕೆ ಇಮೇಲ್ ಗಳು ಬಂದಿವೆ ಎಂದು ಹೇಳಲಾಗುತ್ತಿದೆ. 

ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸದ್ಯ ಎಲ್ಲಾ ಶಾಲೆಗಳಲ್ಲಿಯೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ವಿಚಾರ ತಿಳಿಯುತ್ತಿದ್ದಂತೆಯೇ ಪೋಷಕರು ಶಾಲೆ ಬಳಿ ಓಡೋಡಿ ಬಂದು ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com