ಗೊಂದಲಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ: ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಬಿಡುಗಡೆ

ಜಮ್ಮು ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ದಾಳಿ ವೇಳೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿ ಹುತಾತ್ಮರಾದ ರಾಜ್ಯದ ಹೆಮ್ಮೆಯ ವೀರಯೋಧ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಘೋಷಣೆಯಂತೆ 50 ಲಕ್ಷ ರೂಪಾಯಿಗಳ ಪರಿಹಾರ ಧನ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ದಾಳಿ ವೇಳೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿ ಹುತಾತ್ಮರಾದ ರಾಜ್ಯದ ಹೆಮ್ಮೆಯ ವೀರಯೋಧ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಘೋಷಣೆಯಂತೆ 50 ಲಕ್ಷ ರೂಪಾಯಿಗಳ ಪರಿಹಾರ ಧನ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್)‌ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು,  ಜಮ್ಮು–ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರ ಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ, ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ.

ಪರಿಹಾರ ಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು, ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ” ಎಂದು ತಿಳಿಸಿದ್ದಾರೆ.

ಹುತಾತ್ಮ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಹೆಸರನ್ನು ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರೆತ ಹಾಗೆ ಮಾತನಾಡಿದ್ದರು. ಅಲ್ಲದೇ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಕುಟುಂಬಕ್ಕೆ ಪರಿಹಾರದ ಕಾಲಮಿತಿ ಕುರಿತು ಪತ್ರಕರ್ತರು ಕೇಳಿದಾಗ, ಪರಿಹಾರವನ್ನು ಯಾರು, ಯಾವಾಗ ಘೋಷಿಸಿದರು ಎಂದು ಸಿದ್ದರಾಮಯ್ಯ ಸುದ್ದಿಗಾರರನ್ನು ಪ್ರಶ್ನಿಸಿದ್ದರು.

ಈ ವಿಡಿಯೋವನ್ನು ಬಳಸಿಕೊಂಡಿದ್ದ ಬಿಜೆಪಿ ಐಟಿ ಸೆಲ್, ಹುತಾತ್ಮ ವೀರ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ.50 ಲಕ್ಷ ಪರಿಹಾರ ಕೊಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಮತಿಭ್ರಮಣೆಗೊಂಡು ಯಾರು ಹೇಳಿದ್ದು ಎಂದು ಕೇಳುತ್ತಿದ್ದಾರೆ. ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಅವರು ಹಿಂದೆಂದೂ ‌ನಡೆದುಕೊಂಡಿಲ್ಲ ಅದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಲೇ ಇದ್ದಾರೆ. ಇದೀಗ ಯೋಧನ ಸಾವಿನ ವಿಚಾರದಲ್ಲಿ ತಮ್ಮ ಹೀನ ಮನಸ್ಥಿತಿಯನ್ನು ತೋರಿಸಿದ್ದಾರೆ. ಎಟಿಎಂ ಸರ್ಕಾರ ಮೂರನ್ನೂ ಬಿಟ್ಟುವರು ಊರಿಗೆ ದೊಡ್ಡವರು ಎನ್ನುವ ಸಂದೇಶ ಸಾರುತ್ತಿರುವುದು ನಿಜಕ್ಕೂ ದುರಂತ’ ಎಂದು ಟ್ವೀಟ್ ಮಾಡಿತ್ತು. ಇದೀಗ ಪರಿಹಾರ ಮಂಜೂರಾತಿ ಆದೇಶ ಪ್ರತಿಯನ್ನೇ ಟ್ವೀಟ್ ಮಾಡುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com